|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಜಾನನಂ ಭೂತ ಗಣಾದಿ ಸೇವಿತಂ...

ಗಜಾನನಂ ಭೂತ ಗಣಾದಿ ಸೇವಿತಂ...



ಭಾದ್ರಪದ ಮಾಸದ ಶುಕ್ಲಪಕ್ಷದ ಗಣೇಶ ಚತುರ್ಥಿಯ ಶುಭಾಶಯಗಳು.


ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ.


ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶನ ಹಬ್ಬ ಕೇವಲ ಕುಟುಂಬದ ಆಚರಣೆಯಾಗಿತ್ತು. ಮನೆ-ಮನೆಗಳಲ್ಲಿ ಮಾತ್ರ ಆಚರಣೆಯಲ್ಲಿದ್ದ ಗಣೇಶೋತ್ಸವವನ್ನು ಲೋಕಮಾನ್ಯ ಬಾಲಗಂಗಾಧರ  ತಿಲಕರು ಜನರಲ್ಲಿನ ಸ್ವಾತಂತ್ರ್ಯದ ಕಿಚ್ಚನ್ನು ಹೊರಗೆಡವುವ ಸಾಧನವಾಗಿ ಬಳಸಿಕೊಂಡರು. 1892ರಲ್ಲಿ ಮಹಾರಾಷ್ಟ್ರದಲ್ಲಿ ಬಾವ್ ಸಾಹೆಬ್ ಲಕ್ಷ್ಮಣ್ ಜವೇಲ್ ಅವರು ಪ್ರಪ್ರಥಮ  ಸಾರ್ವಜನಿಕ ಗಣೇಶೋತ್ಸವನ್ನು ಆಚರಣೆ ಮಾಡಿದರಾದರೂ, 1893ರಲ್ಲಿ ತಿಲಕರು ಅದಕ್ಕೆ ಸಂಪೂರ್ಣ ಸಾರ್ವಜನಿಕ ಸ್ವರೂಪ ನೀಡಿದರು. ತಮ್ಮ ಕೇಸರಿ ಪತ್ರಿಕೆಯಲ್ಲಿ ಸಾರ್ವಜನಿಕ  ಗಣೇಶೋತ್ಸವದ ಪರಿಕಲ್ಪನೆ ಕುರಿತು ಬರೆದಿದ್ದ ತಿಲಕರು, 1894ರಲ್ಲಿ ಪುಣೆಯ ಕೇಸರಿ ವಾಡದಲ್ಲಿ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವವನ್ನು ಆರಂಭಿಸಿದರು.


ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ.ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.


ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿನಾಯಕನಾಗಿರುವನು.


ಗಣೇಶ ಹಬ್ಬ:

ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ.

ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂಲೋಕಕ್ಕೆ ಬಂದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಅಂದು ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.


ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು.ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.


ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.


Drawing By: Ranjitha Karanth


-ಶ್ರವಣ್ ಕಾರಂತ್ ಕೆ

ಸುಪ್ರಭಾತ

ಶಕ್ತಿನಗರ ಮಂಗಳೂರು.

+91 8150075651


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم