ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮತ್ತು ಯುವ ರೆಡ್ ಕ್ರಾಸ್, ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಜಂಟಿ ಸಹಭಾಗಿತ್ವದಲ್ಲಿ ಜನವರಿ 12 (ಬುಧವಾರ) ರಂದು ನಗರದ ತಣ್ಣೀರುಬಾವಿಯ ವೃಕ್ಷ ಉದ್ಯಾನವನದಲ್ಲಿ ಬೆಳಗ್ಗೆ 9.30ಕ್ಕೆ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆಯ ಅಂಗವಾಗಿ 'ರಾಷ್ಟ್ರೀಯ ಯುವ ದಿನಾಚರಣೆ' ಮತ್ತು ಅದರ ಪ್ರಯುಕ್ತ ಯುವ ಜಾಗೃತಿ ಚೇತನ- ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಆಯೋಜಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸಭಾಪತಿ ಸಿ ಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಉತ್ತರ ಸಹಾಯಕ ಪೊಲೀಸ್ ಆಯುಕ್ತ ಎಸ್. ಮಹೇಶ್ ಕುಮಾರ್, ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್, ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಪೈ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಉಪಸಭಾಪತಿ ನಿತ್ಯಾನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿರಲಿದ್ದಾರೆ.
ಶ್ರೀ ಧವಳಾ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಅಜಿತ್ ಪ್ರಸಾದ್, ಗುರುವಾಯನಕೆರೆ ಸರ್ಕಾರಿ ಹಿರಿಯ ಪ್ರೌಢ ಶಾಲೆಯ ಕಲಾ ಶಿಕ್ಷಕ ವಿ ಕೆ ವಿಟ್ಲ ಹಾಗೂ ಖ್ಯಾತ ಮರಳು ಶಿಲ್ಪಿ ಹರೀಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಧ ವಿಚಾರಗಳ ಬಗ್ಗೆ ವಿಚಾರ ಮಂಡಿಸಲಿದ್ದಾರೆ. ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಬೆಳಗ್ಗೆ 7.30 ರಿಂದ 9.30 ರ ವರೆಗೆ ಬೀಚ್ ಕ್ಲೀನಿಂಗ್ ಹಮ್ಮಿಕೊಳ್ಳಲಾಗಿದೆ, ಎಂದು ಆಯೋಜಕರು ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ