ಬೆಂಗಳೂರು : ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಯೋಜನೆಗಳಲ್ಲೊಂದಾದ ಉಚಿತ ಸಾಮೂಹಿಕ ವಿವಾಹ- ಸಪ್ತಪದಿ ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಮದುವೆಗೆ ಖರ್ಚು ಮಾಡಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಪ್ರಾರಂಭಿಸಿತ್ತು.
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಈಗ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತೆ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಏಪ್ರಿಲ್ 28, 2022 ಮತ್ತು ಮೇ 11 ಮತ್ತು 25, 2022ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.