ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಸಚಿವ ಮುರುಗೇಶ್ ನಿರಾಣಿಯವರಿಂದ ಚಾಲನೆ

Upayuktha
0


ಮಂಗಳೂರು:  ನಗರದ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್ನ‌ಲ್ಲಿ ಇಂದು ( ಗುರುವಾರ)  ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಕೆಐಡಿಬಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎನ್. ಶಿವಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ  ವಿವಿಧ ಅಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಳೆದ ವರ್ಷ ಅಕ್ಟೋಬರ್ 11 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.


ಮುರುಗೇಶ ಆರ್ ನಿರಾಣಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ನಂತರ ಮೊದಲಿಗೆ ಆದ್ಯತೆ ಮೇರೆಗೆ ಉದ್ಯಮಿಯಾಗು ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಬೆಂಗಳೂರು, ಕಲಬುರಗಿ, ಬೆಳಗಾವಿ ಹಾಗೂ ಮೈಸೂರಿನಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ಅವರ ನೇತೃತ್ವದಲ್ಲಿ ಈಗ ಮಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಮುಂದಿನ ಹಂತದಲ್ಲಿ ಬೆಂಗಳೂರಿನ ಕಂದಾಯ ವಿಭಾಗ 2ರಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತದೆ.


ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಉದ್ಯಮಿಗಳಾಗುವುದು ಹೇಗೆ? ಎಲ್ಲಿ ಮತ್ತು ಹೇಗೆ ಸಾಲಸೌಲಭ್ಯ ದೊರೆಯುತ್ತದೆ? ಯಾವ ಯಾವ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವಕಾಶ ಇದೆ ಎಂಬುದನ್ನು ತಜ್ಞರು ವಿವರಣೆ ನೀಡಿದರು.


ಪುತ್ತೂರು ಹಾಗೂ ಉಡುಪಿಯ ವಿದ್ಯಾರ್ಥಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾದರು.


ಹೆಚ್ಚುವರಿ ತರಬೇತಿ:

ಈ ಕಾರ್ಯಾಗಾರ ಒಂದು ದಿನಕ್ಕೆ ಸೀಮಿತವಾಗಿಲ್ಲ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಇದರಲ್ಲಿ 50,000 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ತಾಸಿನ ಆನ್‍ಲೈನ್ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ. ಆಯ್ದ10,000 ಆಸಕ್ತರಿಗೆ ಅವರ ಆಸಕ್ತಿಯ  ಕ್ಷೇತ್ರಗಳಲ್ಲಿ ಅಥವಾ ಐಬಿಎಂ, ವಿಪ್ರೋ, ಇನ್ಫೋಸಿಸ್,ಕಂಪನಿಗಳಲ್ಲಿ 3 ದಿನಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಅಂತಿಮ ಹಂತದವರೆಗೆ ಆಸಕ್ತಿ ಕಾಯ್ದುಕೊಳ್ಳುವ 2,000 ಮಂದಿಗೆ ಮಾರ್ಗದರ್ಶಕರ ಜತೆ ನೇರ ಸಂಪರ್ಕ ಕಲ್ಪಿಸಲಾಗುತ್ತದೆ. ಈ ಪೈಕಿ ಕನಿಷ್ಠ 1,000 ಜನರಾದರೂ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮುವ ನಿರೀಕ್ಷೆ ಇದೆ.


ವಿದ್ಯಾರ್ಥಿಗಳಿಗೆ ಉದ್ಯಮ ಕುರಿತ ಮಾಹಿತಿ/ತರಬೇತಿಗೆ ಪ್ರತ್ಯೇಕ ಪಠ್ಯಕ್ರಮ ರೂಪಿಸಲಾಗುವುದು. ಟೆಕ್ಸಾಕ್ ಎಂಬ ತಾಂತ್ರಿಕ ಸಂಸ್ಥೆ ಮೂಲಕ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು,"ಎಂದು ದೊಡ್ಡ ಬಸವರಾಜು ತಿಳಿಸಿದರು.


ಕೈಗಾರಿಕಾ ಅದಾಲತ್:

ಉದ್ಯಮಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯು ಮಂಗಳೂರು ವಿಭಾಗದಲ್ಲಿ  2022ರ ಮೇ 12ರಂದು ಮಧ್ಯಾಹ್ನ 3.30ಕ್ಕೆ 'ಕೈಗಾರಿಕಾ ಅದಾಲತ್' ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮದಾರರ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ.


ದಕ್ಷಿಣ ಕನ್ನಡ, ಉಡುಪಿ ಭಾಗದ ಉದ್ಯಮಿಗಳ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ಸೂಚಿಸಲಾಗುತ್ತದೆ.

ವಿದ್ಯುತ್ ಸರಬರಾಜು ಕಂಪನಿ, ಪೌರಾಡಳಿತ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರ ಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮುಂತಾದ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುತ್ತದೆ. ಇದಲ್ಲದೇ, ಕೈಗಾರಿಕಾ ಘಟಕ ಸ್ಥಾಪನೆಯ ವಿವಿಧ ಹಂತದ ಅನುಮತಿ ಪಡೆಯಲು ಈ ವೇದಿಕೆ ನೆರವಾಗಲಿದೆ.


ಜಿಲ್ಲೆಯಿಂದ ಹಲವು ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳು ಬಂದಿವೆ. ಈಗಾಗಲೇ ಕೆಲವರ ಸಮಸ್ಯೆಗೆ ಪರಿಹಾರ ಸೂಚಿಸಲಾಗಿದೆ. ಇನ್ನು ಕೆಲವು ಅರ್ಜಿಗಳ ಕುರಿತು ಸಚಿವರು ನಾಳೆ ನೇರವಾಗಿ ಉದ್ಯಮಿಗಳ ಜತೆ ಚರ್ಚಿಸಿ, ಪರಿಹಾರ ಸೂಚಿಸಲಿದ್ದಾರೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಎಂಎಸ್‍ಎಂಇ ಮತ್ತು ಪಿಪಿ) ಅಪರ ನಿರ್ದೇಶಕ ಎಚ್.ಎಂ. ಶ್ರೀನಿವಾಸ್ ಹೇಳಿದರು.


ಕೈಗಾರಿಕೋದ್ಯಮಿಗಳು, ವಿವಿಧ ಕೈಗಾರಿಕೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಈ 'ಕೈಗಾರಿಕಾ ಅದಾಲತ್‍ನಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಕೋರಿದರು.


ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್  ಹಾಗೂ ಟೆಕ್ಸಾಕ್ ಸಿಇಓ ರಮಾನಂದ ನಾಯಕ್ ಗೋಷ್ಠಿಯಲ್ಲಿದ್ದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top