ಉಜಿರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಶಿಸ್ತು, ಪ್ರಾಮಾಣಿಕತೆ ಮತ್ತು ಸಮಯ ಪಾಲನೆ ಮುಂತಾದ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅಗತ್ಯ. ವಿದ್ಯಾರ್ಥಿಗಳು, ವಿವಿದ ವಿಭಾಗಗಳ ಉಪನ್ಯಾಸಕರು ಮತ್ತು ಕಾಲೇಜಿನ ಆಡಳಿತ ಮಂಡಳಿ ನಡುವೆ ಉತ್ತಮ ಬಾಂಧವ್ಯ ಬೆಸೆಯುವಂತೆ ಮಾಡುವುದು ಕಾಲೇಜಿನ ಶಿಸ್ತು ಸಮಿತಿಯು ಉದ್ದೇಶವಾಗಿದೆ ಎಂದು ಕಾಲೇಜಿನ ಬಿ.ವೋಕ್ ವಿಭಾಗದ ರೀಟೇಲ್ ಮತ್ತು ಸಪ್ಲೈ ಚೈನ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮತ್ತು ಶಿಸ್ತು ಸಮಿತಿಯ ಸದಸ್ಯ ಅಶ್ವಿತ್ ಹೆಚ್.ಆರ್. ಹೇಳಿದರು.
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಪಿ.ಜಿ. ಸೆಮಿನಾರ್ ಹಾಲ್‍ನಲ್ಲಿ ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮತ್ತು ಶಿಸ್ತು ಸಮಿತಿಯ ಆಶ್ರಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾಲೇಜು ಆವರಣದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಕಾಲೇಜಿನ ಶಿಸ್ತು ಕ್ರಮಗಳನ್ನು ಪಾಲಿಸುವುದು ಅಗತ್ಯ. ವಿದ್ಯಾರ್ಥಿಗಳು ತರಗತಿ ಮತ್ತು ಕಾಲೇಜು ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಧಕ್ಕೆ ತರುವಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ಬಗೆಗಿನ ಪರಿಚಯ ಮತ್ತು ವಾರ್ಷಿಕ ಚಟುವಟಿಕೆಗಳ ಬಗ್ಗೆ ವಿವರಿಸಿ ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮತ್ತು ಶಿಸ್ತು ಸಮಿತಿಯ ಸಂಯೋಜಕ ಮತ್ತು ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನ್ ಕುಮಾರ್ ಮಾತನಾಡಿದರು. ಶಿಸ್ತು ಒಬ್ಬ ವ್ಯಕ್ತಿಯನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸುತ್ತದೆ. ಶಿಕ್ಷಣವು ಹೆಚ್ಚಿನ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ದೊರೆಯುತ್ತದೆ, ಆದರೆ ಉತ್ತಮ ಶಿಕ್ಷಣದ ಜೊತೆ ನೈತಿಕ ಶಿಕ್ಷಣ ಎಲ್ಲಾ ಕಡೆ ದೊರೆಯುವುದಿಲ್ಲ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಉತ್ತಮವಾದ ಮೌಲ್ಯಯುತ ಶಿಕ್ಷಣ ನೀಡಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನು ರೂಪುಗೊಳಿಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಸ್ನಾತಕೋತ್ತರ ಕೇಂದ್ರದ ಭೌತ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಹನಾ ಕೆ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾ ಎ.ಜೆ., ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರ್ಷಿತ್ ಕುಮಾರ್ ಶೆಟ್ಟಿ, ಬಿ.ವೋಕ್ ರೀಟೇಲ್ ಮತ್ತು ಸಪ್ಲೈ ಚೈನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಧುರಾ ಗೌಡ ಉಪಸ್ಥಿತರಿದ್ದರು.