ಸಹಕಾರ ರತ್ನ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‍‌ 74ನೇ ಹುಟ್ಟುಹಬ್ಬದ ಸಂಭ್ರಮ

Upayuktha
0

ಫೆ.24ರಂದು ಅಭಿನಂದನಾ ಸಮಾರಂಭ, ಸವಲತ್ತುಗಳ ವಿತರಣೆ


ಮಂಗಳೂರು: ಕರ್ನಾಟಕ ರಾಹ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರು ಮತ್ತು ರಾಜ್ಯ ಅಪೆಕ್ಸ್‌ ಬ್ಯಾಂಕಿನ ಮಾಜಿ ಅಧ್ಯಕ್ಷರಾದ 'ಸಹಕಾರ ರತ್ನ' ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಮತ್ತು ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ಫೆ.24ರಂದು ಶುಕ್ರವಾರ ಆಯೋಜಿಸಲಾಗಿದೆ.

ಸಹಕಾರ ರತ್ನ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‍‌ ಅಭಿನಂದನಾ ಸಮಿತಿ ಈ ಕಾರ್ಯಕ್ರಮ ಆಯೋಜಿಸಿದ್ದು, ಕೊಡಿಯಾಲ್‌ಬೈಲಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 10:30ಕ್ಕೆ ಜರಗಲಿದೆ.

ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುವೇದಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಅಲ್ಲದೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಸ್‌. ಯಡಪಡಿತ್ತಾಯ ಅವರು ಡಾ| ಎಂ.ಎನ್‌. ರಾಜೇಂದ್ರ ಕುಮಾರ್‍‌ ಅವರನ್ನು ಅಭಿವಂದಿಸಿ ಗೌರವಿಸಲಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷರಾದ ಎಸ್‌. ಪ್ರದೀಪ್‌ ಕುಮಾರ್‍‌ ಕಲ್ಕೂರ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ.

ಮಂಗಳೂರು ದಕ್ಷಿಣ ವಿಧಾಣಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ರವಿಕುಮಾರ್‍‌ ಎಂ.ಆರ್‍‌ ಮತ್ತು ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎಸ್‌. ಪ್ರಕಾಶ್‌ ಅವರು 74 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳೂ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಿದ್ದಾರೆ.

ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ಅವರು ಇಂದು (ಫೆ.20, ಸೋಮವಾರ) ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸಮಿತಿಯ ಕಾರ್ಯಾಧ್ಯಕ್ಷರಾದ ಶಶಿಕುಮಾರ್‍‌ ರೈ ಬಾಲ್ಯೋಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ ಎನ್‌. ಕೋಟ್ಯಾನ್‌ ಹಾಗೂ ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಡಾ| ಎಂ.ಎನ್‌. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ್ನು ಉತ್ತುಂಗಕ್ಕೆ ಒಯ್ಯುವಲ್ಲಿ ಪ್ರಧಾನ ಪಾತ್ರವಹಿಸಿದ್ದಾರೆ. ಅಂತೆಯೇ ಒಂದು ಅವಧಿಗೆ ರಾಜ್ಯ ಅಪೆಕ್ಸ್‌ ಬ್ಯಾಂಕಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿ ಸಹಕಾರ ಕ್ಷೇತ್ರದ ಬಲವರ್ಧನೆಗೆ ಕೊಡುಗೆಗಳನ್ನು ನೀಡಿದ್ದಾರೆ. ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿಯೂ ಆಗಿರುವ ಅವರು 'ಸಹಕಾರ ರತ್ನ' ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top