ನಿಟ್ಟೆ: ‘ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಶಿಸ್ತು, ಏಕಾಗ್ರತೆ ಮುಂತಾದ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದಾಗಿದೆ. ಕ್ರೀಡೆಯೆಂಬುದು ಸ್ನೇಹಕ್ಕಾಗಿ ಹಾಗೂ ವಿನೋದಕ್ಕಾಗಿಯೂ ಆಡಬಹುದು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ಸೋಲಿಗೆ ಅಂಜುವ ಅಗತ್ಯತೆ ಇರದು’ ಎಂದು ಮಂಗಳೂರು ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಠಾಣೆಯ ಸಬ್ ಇನ್ಸ್ಫೆಕ್ಟರ್ ಗುಣಪಾಲ ಜೆ ಅಭಿಪ್ರಾಯಪಟ್ಟರು.
ಅವರು ಮಾ.14ರಂದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್‌ನ ಬಿ.ಸಿ. ಆಳ್ವಾ ಕ್ರೀಡಾಸಂಕೀರ್ಣದಲ್ಲಿ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೩೭ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆನೀಡಿ ಮಾತನಾಡಿದರು.
‘ಕ್ರೀಡೆಯಿಂದ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯವೂ ಉತ್ತಮಗೊಳ್ಳುತ್ತದೆ. ನಮ್ಮ ಎಂಜಿನಿಯರಿಂಗ್ ಪದವಿ ವಿದ್ಯಾಭ್ಯಾಸದ ಸಂದರ್ಭದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಮಗೆ ಸಿಕ್ಕ ಪ್ರೋತ್ಸಾಹವೇ ನಾನಿಂದು ಪೊಲೀಸ್ ಇಲಾಖೆಯನ್ನು ಸೇರಲು ಸ್ಪೂರ್ತಿಯಾಗಿದೆ ಎಂದರೆ ತಪ್ಪಾಗದು’ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ. ಐ ರಮೇಶ್ ಮಿತ್ತಂತಾಯ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ 'ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿನ ವಿವಿಧ ಕ್ರೀಡಾಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ನಿಟ್ಟೆ ಕ್ಯಾಂಪಸ್ ನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ, ರಾಜ್ಯ ಮಟ್ಟದ ಹಾಗೂ ರಾಷ್ಟ್ರಮಟ್ಟದ ಹಲವಾರು ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಹಿರಿಮೆ ನಮ್ಮದು' ಎಂದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ಎಮೆಚೂರ್ ಎಥ್ಲೆಟಿಕ್ ಎಸೋಸಿಯೇಶನ್ ನ ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಉಪಪ್ರಾಂಶುಪಾಲ ಡಾ. ಶ್ರೀನಿವಾಸ ರಾವ್ ಬಿ.ಆರ್, ಕ್ಯಾಂಪಸ್‌ನ ಮೈಂಟೆನೆನ್ಸ್ & ಡೆವಲಪ್ಮೆಂಟ್ ನ ನಿರ್ದೇಶಕ ಪ್ರೊ. ಯೋಗೀಶ್ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕೇತರವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ಪೂಜಾರಿ ಸ್ವಾಗತಿಸಿದರು. ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್‌ಸುಂದರ್ ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ.ರೋಶನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ