ಮಂಗಳೂರು ವಿವಿಯ ರಸಾಯನಶಾಸ್ತ್ರ ವಿಭಾಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಮಂಗಳೂರು: ಭಾರತೀಯ ವಿಜ್ಞಾನಿಗಳ ಸಾಧನೆ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ಈ ಸಾಧನೆಯೇ ಭಾರತ ಅಭಿವೃದ್ಧಿ ಹೊಂದಿದ ದೇಶಗಳ ಪಟ್ಟಿ ಸೇರುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ, ಎಂದು ಎನ್.ಐ.ಟಿ.ಕೆ (ಸುರತ್ಕಲ್) ಯ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ದರ್ಶಕ್ ಆರ್. ತ್ರಿವೇದಿ ಅವರು ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗ, ರಾಷ್ಟ್ರೀಯ ವಿಜ್ಞಾನ ದಿನಾಚರಣೆ- 2023 ರ ಪ್ರಯುಕ್ತ ವಿಭಾಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ʼರಸಾಯನಶಾಸ್ತ್ರ ಕ್ಷೇತ್ರದಲ್ಲಿ ಇತ್ತೀಚಿನ ಬೆಳವಣಿಗೆಗಳುʼ ಎಂಬ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು, ನೋಬೆಲ್ ಪಾರಿತೋಷಕ ವಿಜೇತ ಭಾರತೀಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ಆವಿಷ್ಕಾರವಾದ ʼರಾಮನ್ ಪರಿಣಾಮʼ, ರಸಾಯನಶಾಸ್ತ್ರದ ಬೆಳವಣಿಗೆಯಲ್ಲಿ ಯಾವ ರೀತಿಯ ಮುಖ್ಯ ಪಾತ್ರ ವಹಿಸಿತು ಎಂಬುದನ್ನು ವಿವರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ, ಕುಲಸಚಿವರೂ (ಪರೀಕ್ಷಾಂಗ) ಆಗಿರುವ ಡಾ. ರಾಜು ಕೃಷ್ಣ ಚಲನ್ನವರ್ ಮಾತನಾಡಿ, ಜನಸಾಮಾನ್ಯರಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವುದೇ ವಿಜ್ಞಾನ ದಿನಾಚರಣೆಯ ಉದ್ದೇಶ, ಎಂದರಲ್ಲದೆ ಆಯೋಜಕರನ್ನು ಶ್ಲಾಘಿಸಿದರು. ಡಾ. ದರ್ಶಕ್ ಆರ್. ತ್ರಿವೇದಿ ಹಾಗೂ ಕೇಂದ್ರೀಯ ವಿಶ್ವವಿದ್ಯಾನಿಲಯ (ಕೇರಳ)ದ ರಸಾಯನಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ಕೆ ಶಿವಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಬಿ ವಿಶಾಲಾಕ್ಷಿ ಇವರು ಅತಿಥಿಗಳನ್ನು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರು ಹಾಗೂ ಕಾರ್ಯಕ್ರಮ ಸಂಚಾಲಕರಾದ ಡಾ. ಎಂ ಆರ್ ಮದ್ವಾನಿ ಅವರು ಧನ್ಯವಾದ ಸಮರ್ಪಿಸಿದರು. ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗದ ಹತ್ತು ಮಂದಿ ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ವಿದ್ಯಾರ್ಥಿಗಳಾದ ಪ್ರಣಮ್ ಮತ್ತು ಪ್ರಗತಿ, ವಿಜ್ಞಾನದ ಬೆಳವಣಿಗೆಗಳನ್ನು ಮಾನವ ಕಲ್ಯಾಣಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಭಿಪ್ರಾಯ ಮಂಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ