ಮತ ಮಾರಿಕೊಳ್ಳಬೇಡಿ : ನ್ಯಾ.ಶಾಂತವೀರ ಶಿವಪ್ಪ

Upayuktha
0


 ಉಡುಪಿ: ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.


ಅವರು ಇಂದು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ, ಮತದಾನ ಜಾಗೃತಿ ಸಾರುವ ಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.


ಈ ಚುನಾವಣೆಯಲ್ಲಿ ಬಹುತೇಕ ಯುವ ಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆ ಉತ್ತಮ ಯೋಜನೆ ರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.


ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದ ಜಿಲ್ಲೆಗೆ ಚುನಾವಣಾ ಆಯೋಗದಿಂದ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದು ಜಿಲ್ಲೆಯ ಎಲ್ಲಾ ಯುವಜನತೆ ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಬೇಕು ಎಂದರು.


ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ನಗರಸಭೆಯ ಪೌರಾಯುಕ್ತ ರಮೇಶ್ ನಾಯಕ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಮತ್ತಿತರರು ಭಾಗವಹಿಸಿದ್ದರು.


ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.


ಕಾಲೇಜಿನ 2000 ಕ್ಕೂ ಅಧಿಕ ವಿದ್ಯಾರ್ಥಿನಿಯರು ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.


ಎಲೆಕ್ಟ್ರಾನಿಕ್ ಮತ ಯಂತ್ರ ಹಾಗೂ ವಿವಿ ಪ್ಯಾಟ್‌ನ ಸ್ತಬ್ಧಚಿತ್ರವನ್ನು ಒಳಗೊಂಡಿರುವ ಮತದಾನ ಜಾಗೃತಿ ಮೂಡಿಸುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top