ಅಶಿಸ್ತು, ವಿಳಂಬ ಸಹಿಸುವುದಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್

Upayuktha
0

 

ಉಡುಪಿ: ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬಂದಲ್ಲಿ ಅಂತಹ ಅಧಿಕಾರಿಗಳು ವಿರುದ್ದ ಕಠಿಣಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.


ಅವರು ನಿನ್ನೆ ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.  


ರಾಜ್ಯದಲ್ಲಿ ಪ್ರಸ್ತುತ ನೂತನ ಸರ್ಕಾರ ಜಾರಿಗೆ ಬಂದಿದೆ, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಸರಕಾರಕ್ಕೆ ಒಳ್ಳೆಯ ಹೆಸರು ತರುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ.  ಈ ಕಾರ್ಯದಲ್ಲಿ ಅನಗತ್ಯ ವಿಳಂಬ ಹಾಗೂ ಅಶಿಸ್ತು ತೋರಿದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಠಿಣಕ್ರಮ ಕೈಗೊಳ್ಳುವುದಾಗಿ ಸಚಿವರು ಸೂಚನೆ ನೀಡಿದರು.


ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ನಬಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಸಮರ್ಪಕವಾಗಿ ಅನುಷ್ಠಾನ ಮಾಡಲು ಜಿಲ್ಲೆಯಲ್ಲಿ ಅರ್ಹರಿರುವ ಫಲಾನುಭವಿಗಳ ಸಂಖ್ಯೆ,  ಹಾಗೂ  ಯೋಜನೆಯನ್ನು ಅವರಿಗೆ ತಲುಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ವಿವರಗಳನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಜಿಲ್ಲೆಯಲ್ಲಿ ಅಧಿಕಾರಿಗಳು ಜನಪರವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳು ಮೊಬೈಲ್ ನ್ನು ಸ್ವಿಚ್ ಆಫ್ ಮಾಡದೇ, ಕೇಂದ್ರಸ್ಥಾನದಲ್ಲೇ ಇದ್ದು, ಅಗತ್ಯ ಸಂದರ್ಭದಲ್ಲಿ ತಕ್ಷಣವೇ ಸಂಪರ್ಕಕ್ಕೆ ಸಿಗುವಂತಿರಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಾಗ ಅನಗತ್ಯ ವಿಳಂಬ ಹಾಗೂ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸಿದೇ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹರಿಗೆ ಸೌಲಭ್ಯಗಳನ್ನು ಮಂಜೂರು ಮಾಡುವಂತೆ ತಿಳಿಸಿದರು.

 

ಪ್ರಸ್ತುತ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ, ಪ್ರಾಕೃತಿಕ ವಿಕೋಪ ಎದುರಿಸಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಸಿದ್ದತೆಗಳು, ಸಮುದ್ರಕೊರೆತ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದ ಸಚಿವರು, ಮಳೆಗಾಲದಲ್ಲಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಹಾಗೂ ಕಾಲುಸಂಕಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.


ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳನ್ನು ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವಂತೆ ಶೀಘ್ರದಲ್ಲಿ ಹೊಸ ಕಟ್ಟಡಗಳನ್ನು ನಿರ್ಮಿಸಲು ಸೂಕ್ತ ಜಾಗ ಗುರುತಿಸಿ ನಿರ್ಮಾಣಕಾರ್ಯ ಕೈಗೊಳ್ಳುವಂತೆ , ಗಂಟುರೋಗದಿಂದ ಮೃತಪಟ್ಟ ಜಾನುವಾರುಗಳಿಗೆ  ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ  ಹಾಗೂ ಮಳೆಗಾಲದಲ್ಲಿ ರೈತರಿಗೆ ಭಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯದಂತೆ ಎಚ್ಚರವಹಿಸುವಂತೆ  ಮತ್ತು ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.


ಉಡುಪಿ ಜಿಲ್ಲೆಯ ಉಸ್ತುವಾರಿಯನ್ನು ನಾನು ಸಂತೋಷದಿಂದ ಸ್ವೀಕರಿಸಿದ್ದು, ಜಿಲ್ಲೆಯ ಸರ್ವತೋಮುಖ ಅಭಿವೃಧ್ದಿಗೆ ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು , ಸಮನ್ವಯದಿಂದ ಜನಪರ ಕಾಳಜಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.


ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್‍ಅಧೀಕ್ಷಕ ಅಕ್ಷಯ್‍ ಎಮ್ ಹಾಕೆ, ಕಾರ್ಕಳ ವಿಭಾಗದಡಿಎಫ್ ಓ ಗಣಪತಿ, ಅಪರಜಿಲ್ಲಾಧಿಕಾರಿ ವೀಣಾ ಬಿ.ಎನ್,ತರಬೇತಿ ನಿರತಐ.ಎ.ಎಸ್‍ಅಧಿಕಾರಿ ಯತೀಶ್ ,ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top