ಮಹಿಳೆಯರು ಸ್ವ-ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿ: ಪ್ರಸನ್ನ ಹೆಚ್

Upayuktha
0

ಉಡುಪಿ: ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳುವಂತಹ ತರಬೇತಿಯನ್ನು ನೀಡುವುದರೊಂದಿಗೆ ಅವರುಗಳು ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕರೆ ನೀಡಿದರು. 

  

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‍ನ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸರ್ಕಾರ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯ ಮಹಿಳೆಯರು ಇವುಗಳ ಬಗ್ಗೆ ಅರಿವು ಹೊಂದುವುದರ ಜೊತೆಗೆ ಫಲಾನುಭವಿಗಳಾಗಿ ಆರ್ಥಿಕವಾಗಿ ಸಬಲರಾಗಬೇಕು ಎಂದರು. 


ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕ ಹಾಗೂ ಮಾರಾಟ ನಿಷೇಧ ಕಾಯ್ದೆಗಳನ್ನು ಅನುಷ್ಠಾನಗೊಳಿಸಲು ಗ್ರಾಮ ಪಂಚಾಯತಿ ಮಟ್ಟದ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯಚಟುವಟಿಕೆಗಳನ್ನು ಮಾಡುವುದರೊಂದಿಗೆ ಯಾವುದೇ ಪ್ರಕರಣಗಳು ಆಗದಂತೆ ಎಚ್ಚರ ವಹಿಸಬೇಕು ಎಂದರು.

 

ಶಿಶು ಪಾಲನಾ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವುದರೊಂದಿಗೆ ಅಲ್ಲಿ ಮಕ್ಕಳ ಪಾಲನೆ ಉತ್ತಮವಾಗಿರಬೇಕು ಎಂದ ಅವರು, ಪಾಲನಾ ಕೇಂದ್ರಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ತಿಳಿಸಿದರು.

   

ಜಿಲ್ಲೆಯಲ್ಲಿ ಸ್ತ್ರೀ ಶಕ್ತಿ ಭವನಗಳು ಮಹಿಳೆಯರ ಚಟುವಟಿಕೆಗೆ ಪೂರಕವಾಗಿ ಇರಬೇಕು. ಮಹಿಳೆಯರ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸ್ತ್ರೀ ಶಕ್ತಿ ಭವನದಲ್ಲಿ ನಡೆಸಲು ಅನುಮತಿ ಮಾಡಿಕೊಡಬೇಕು ಎಂದ ಅವರು, ಸ್ತ್ರೀ ಶಕ್ತಿ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

   

ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 4 ವರದಕ್ಷಿಣೆ ಪ್ರಕರಣಗಳಾಗಿವೆ. ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಸಾಂತ್ವಾನ ಕೇಂದ್ರಗಳಿಗೆ ಸಮಸ್ಯೆಯನ್ನು ಹೊತ್ತು ತಂದ ಮಹಿಳೆಯರಿಗೆ ಸಮಾಲೋಚನೆಗಳನ್ನು ನಡೆಸುವುದರ ಮೂಲಕ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥ ಮಾಡಬೇಕು ಎಂದರು.


ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಎಎಸ್‍ಪಿ ಎಸ್ ಸಿದ್ಧಲಿಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ ಹೆಚ್ ಕೃಷ್ಣಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇಲಾಖಾ ವರ್ಗದವರು ಉಪಸ್ಥಿತರಿದ್ದರು. 

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top