ಉಡುಪಿ: ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಧೀಮಂತ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಹಾಗೂ ಆಗಸ್ಟ್ 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಆಯೋಜಿಸುವ ಕುರಿತಂತೆ ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಡಿ.ದೇವರಾಜು ಅರಸು ಜಯಂತಿ ಕಾರ್ಯಕ್ರಮವನ್ನು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮ ನಡೆಯುವ ದಿನದಂದು ಎಸ್.ಎಸ್.ಎಲ್.ಸಿ., ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಡಿ.ದೇವರಾಜು ಅರಸು ಅವರ ಜೀವನ, ಸಾಧನೆ ಕುರಿತಂತೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ, ಬಹುಮಾನ ವಿತರಿಸುವಂತೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವಂತೆ ನಿರ್ದೇಶನ ನೀಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮ ನಡೆಯುವ ದಿನದಂದು ನಾರಾಯಣ ಗುರುಗಳ ಕುರಿತು ಗೀತ ಗಾಯನ ಕಾರ್ಯಕ್ರಮ ಆಯೋಜಿಸಿ, ನಾರಾಯಣ ಗುರುಗಳ ಜೀವನ, ತತ್ವ, ಆದರ್ಶಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವಂತೆ ನಿರ್ದೇಶನ ನೀಡಿದರು.
ಬ್ರಹ್ಮಶ್ರೀ ನಾರಾಯಣ ಗುರು ಸಂದೇಶಗಳನ್ನು ಯುವ ಜನತೆಗೆ ತಿಳಿಸುವ ಉದ್ದೇಶದಿಂದ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿಸುವಂತೆ ತಿಳಿಸಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಬ್ರಹಶ್ರೀ ನಾರಾಯಣ ಗುರುಗಳು ಯಾವುದೇ ನಿರ್ದಿಷ್ಟ ಧರ್ಮ, ವರ್ಗಕ್ಕೆ ಸೀಮಿತರಾಗದೇ ಇಡೀ ಮಾನವ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ಜಯಂತಿಯನ್ನು ಮಾದರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕಿದ್ದು, ಇದಕ್ಕೆ ವಿವಿಧ ಸಮುದಾಯಗಳ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡಬೇಕು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ವ್ಯವಸ್ಥಿತ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಲಮಾಣಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಶಂಕರ ಪೂಜಾರಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ