ತನ್ನ ಭಾಷೆ ಪ್ರೀತಿಸುವವರು ಬೇರೆ ಭಾಷೆ ದ್ವೇಷಿಸಬಾರದು: ಡಾ. ಕೆ. ಚಿನ್ನಪ್ಪ ಗೌಡ

Upayuktha
0


ಮಂಗಳೂರು: ಭಾಷೆ, ದೇವರು, ಆಚರಣೆ ಇವುಗಳು ಜನರನ್ನು ಜೋಡಿಸುತ್ತವೆಯೇ ಹೊರತು ದ್ವೇಷಿಸುವಂತೆ ಮಾಡುವುದಿಲ್ಲ. ತನ್ನ ಭಾಷೆಯನ್ನು ಪ್ರೀತಿಸುವವರು ಬೇರೆ ಭಾಷೆಯನ್ನು ದ್ವೇಷಿಸುವುದಿಲ್ಲ ಹಾಗೂ ದ್ವೇಷಿಸಬಾರದು, ಎಂದು ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅಭಿಪ್ರಾಯಪಟ್ಟರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್‌ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯನ ಪೀಠದ ಜಂಟಿ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ 'ಬ್ಯಾರಿ ಭಾಷಾ ದಿನಾಚರಣೆ- 2023' ರಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರಕ್ಕೆ ಬ್ಯಾರಿ ಸಾಹಿತ್ಯದ ಕೊಡುಗೆಯನ್ನು ಪ್ರಶಂಸಿಸಿದರು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿ. ಎ ಮಹಮ್ಮದ್‌ ಹನೀಫ್‌, ಬ್ಯಾರಿ ಭಾಷೆಯ ಇತಿಹಾಸ ಮತ್ತು ಸಾಹಿತ್ಯದ ಶ್ರೀಮಂತಿಕೆಯನ್ನು ವಿವರಿಸಿದರು.


ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಯು. ಎಚ್‌. ಖಾಲಿದ್‌ ಉಜಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್‌ ಸಿದ್ದೀಕ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾಗಿ ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಅಖಿಲ ಭಾರತ ಬ್ಯಾರಿ ಪರಿಷತ್‌ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು, ಅಖಿಲ ಭಾರತ ಬ್ಯಾರಿ ಪರಿಷತ್‌ ಕೋಶಾಧಿಕಾರಿ ನಿಸಾರ್‌ ಮಹಮ್ಮದ್‌, ಉಳ್ಳಾಲದ ಬಹುಭಾಷಾ ಕವಯತ್ರಿ ಯು.ಕೆ ಆಯಿಶಾ ಮೊದಲಾದವರು ಉಪಸ್ಥಿತರಿದ್ದರು.


ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯೂಸುಫ್‌ ವಕ್ತಾರ್‌ ಕಾರ್ಯಕ್ರಮ ನಿರ್ವಹಿಸಿದರು. ಖ್ಯಾತ ಬ್ಯಾರಿ ಗಾಯಕ ಶರೀಫ್‌ ನಿರ್ಮುಂಜೆ ಧ್ಯೇಯ ಗೀತೆ ಹಾಡಿದರು. ಬ್ಯಾರಿ ಭಾಷಾ ದಿನದ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top