ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಧರ್ಮಸ್ಥಳದಿಂದ ಪೂರ್ಣ ಬೆಂಬಲ
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 404 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚುಗಳನ್ನು ವಿತರಿಸಿದರು.
ಉಜಿರೆ: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಧರ್ಮಸ್ಥಳದ ವತಿಯಿಂದ ಪೂರ್ಣ ಸಹಕಾರ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಾಗುವುದು. ತನ್ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಶನಿವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ 404 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚುಗಳನ್ನು ವಿತರಿಸಿ ಮಾತನಾಡಿದರು.
ಇದಕ್ಕಾಗಿ ಎರಡೂವರೆ ಕೋಟಿ ರೂ. ವಿನಿಯೋಗಿಸಿದ್ದು ಸುಮಾರು ಹದಿನೆಂಟು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.
ಜ್ಞಾನದೀಪಶಿಕ್ಷಣ ಕಾರ್ಯಕ್ರಮದಡಿಯಲ್ಲಿ 1003 ಸ್ವಯಂ-ಸೇವಕ ಶಿಕ್ಷಕರು/ಶಿಕ್ಷಕಿಯರನ್ನು ಸರ್ಕಾರಿ ಶಾಲೆಗಳಿಗೆ ನಿಯೋಜನೆ ಮಾಡಲಾಗಿದೆ. ಅಲ್ಲದೆ ಶಾಲಾ ಕಟ್ಟಡ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯ ರಚನೆ, ಆಟದ ಮೈದಾನ ಮೊದಲಾದವುಗಳಿಗೆ ಈ ವರೆಗೆ 13.01 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೆಗ್ಗಡೆಯವರು ಪ್ರಕಟಿಸಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಜಿರೆಯ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಮತ್ತು ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಅವರನ್ನು ಧರ್ಮಸ್ಥಳದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.
ಸನ್ಮಾನಿತರು ಅಭಿನಂದನೆಗೆ ಕೃತಜ್ಷತೆ ವ್ಯಕ್ತಪಡಿಸಿದರು.
ಹೇಮಾವತಿ ವೀ. ಹೆಗ್ಗಡೆ, ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಸ್ಥಾಪಕ ವೈದ್ಯಾಧಿಕಾರಿ ಡಾ. ರುದ್ರಪ್ಪ, ಡಾ. ದೀಪಿಕಾ ಶೆಟ್ಟಿ, ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಮುಖ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್, ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ ಪೈ ಉಪಸ್ಥಿತರಿದ್ದರು.
ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ