ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಎಲ್ಲ ಅಭಿವೃದ್ಧಿ ಕಾರ್ಯಗಳೂ ನಿಂತು ಹೋಗಿದ್ದು, ತಾನೇ ನೀಡಿದ ಗ್ಯಾರಂಟಿಗಳನ್ನೂ ಸರಿಯಾಗಿ ಈಡೇರಿಸದೆ ವಚನ ಭ್ರಷ್ಟವಾಗಿದೆ ಎಂದು ದ.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಅನುದಾನಗಳನ್ನೂ ತಡೆ ಹಿಡಿದು ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ದರಾಮಯ್ಯ ಸರಕಾರ ಕಲ್ಲು ಹಾಕಿದೆ. ಪ್ರಸ್ತುತ ಸರಕಾರದ ಗೊತ್ತು ಗುರಿಯಿಲ್ಲದ ನೀತಿಗಳಿಂದಾಗಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿದ್ದು, ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯುತ್ತಿಲ್ಲ. ಕಟ್ಟಡ ನಿರ್ಮಾಣಕ್ಕೆ ಕಚ್ಚಾವಸ್ತು ದೊರಕದೆ, ಸಾವಿರಾರು ಕಟ್ಟಡ ಕಾರ್ಮಿಕರು ಅತಂತ್ರರಾಗಿದ್ದು, ಜಿಲ್ಲೆಯ ಆರ್ಥಿಕತೆಗೂ ಬಹುದೊಡ್ಡ ಹೊಡೆತ ಬಿದ್ದಿದೆ ಎಂದು ಜಗದೀಶ್ ಶೇಣವ ಹೇಳಿದರು.
ನಗರದಲ್ಲಿ ಬಿಜೆಪಿಯ ಜಿಲ್ಲಾ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.
ಕಟ್ಟಡ ಕಾರ್ಮಿಕರು ನಾಳೆ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಅವರು ತಿಳಿಸಿದರು.
ವಾಸ್ತವವಾಗಿ ಜಿಲ್ಲೆಯಲ್ಲಿ ನೈಸರ್ಗಿಕ ಮರಳಿನ ಸಂಪನ್ಮೂಲಕ್ಕೆ ಯಾವುದೇ ಕೊರತೆಯಿಲ್ಲ. ಆದರೆ ಮರಳು ತೆಗೆಯಲು ಅನುಮತಿ ನೀಡದ ಕಾರಣ ಕೃತಕ ಕೊರತೆ ಉದ್ಭವಿಸಿದೆ. ಹಾಗೆಂದು ರಾತ್ರೋರಾತ್ರಿ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಕೋಟ್ಯಂತರ ರೂ.ಗಳನ್ನು ಕೊಳ್ಳೆ ಹೊಡೆಯುವುದು ನಿಂತಿಲ್ಲ ಎಂದು ಶೇಣವ ಹೇಳಿದರು.
ಬಿಜೆಪಿ ಸರಕಾರವಿದ್ದಾಗ ಮಂಗಳೂರು ನಗರ ದಕ್ಷಿಣ ಕ್ಷೇತ್ರಕ್ಕೆ 3,500 ಕೋಟಿ ರೂ. ಉತ್ತರ ಕ್ಷೇತ್ರಕ್ಕೆ 2,500 ಕೋಟಿ ರೂ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ 3,000 ಕೋಟಿ ರೂ ಅನುದಾನ ದೊರಕಿತ್ತು. ಆದರೆ ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರಕಾರ ಅಧಿಕಾರ ಬಂದಾಗಿನಿಂದ ಎಲ್ಲ ಅನುದಾನಗಳನ್ನೂ ತಡೆಹಿಡಿದು, ಇರುವ ಅನುದಾನಗಳನ್ನೂ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಬೇರೆಡೆಗೆ ವರ್ಗಾಯಿಸಿದೆ. ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರಕಾರ, ವಾಸ್ತವದಲ್ಲಿ ನುಡಿದಂತೆ ನಡೆಯದೆ ವಚನಭ್ರಷ್ಟವಾಗಿದೆ. ಗೃಹಲಕ್ಷ್ಮಿ ಯೋಜನೆ ಅತ್ಯಂತ ಜನಪ್ರಿಯವಾಗಿದೆ ನಿಜ. ಆದರೆ ಲಕ್ಷಾಂತರ ಗೃಹಿಣಿಯರಿಗೆ ಅದರ ಹಣವೇ ಬಂದಿಲ್ಲ ಎಂದು ಬಿಜೆಪಿ ವಕ್ತಾರರು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ, ಜಿಪಂ ಮಾಜಿ ಅಧ್ಯಕ್ಷೆ ಕಸ್ತೂರಿ ಪಂಜ, ಮೂಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್, ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ ಅವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ