ಕಾರವಾರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ ಹಾಗೂ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಅವಕಾಶ ಕಲ್ಪಿಸಿದ್ದು, ಜಿಲ್ಲೆಯ 18 ವರ್ಷ ಮೇಲ್ಪಟ್ಟ ಯುವಹಾಗೂ ಎಲ್ಲ ಅರ್ಹಮತದಾರರು ಕೂಡಲೇ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳುವ ಮೂಲಕ , ಕೂಡಲೇ ಹೆಸರು ನೋಂದಣಿ, ತಿದ್ದುಪಡಿಗೆ ಮುಂದಾಗಬೇಕು ಎಂದು ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಅವರು ಕರೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಪ್ರಯುಕ್ತ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾಸ್ವೀಪ್‍ಸಮಿತಿ, ಪದವಿಪೂರ್ವಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ನೋಂದಣಿ, ತಿದ್ದುಪಡಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕುವುದು, ವಿಳಾಸ ಬದಲಾವಣೆಗಾಗಿ ವಿಶೇಷ ಅಭಿಯಾನ ಆಯೋಜಿಸಲಾಗಿದೆ. ಈ ಕುರಿತು ಯುವಮತದಾರರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ. ಜಾಥಾದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಯುವಕ/ಯುವತಿಯರು ತಮ್ಮ ಸುತ್ತಮುತ್ತಲಿನ ಅರ್ಹ ಮತದಾರರಿಗೆ ತಿಳಿಸುವುದರ ಜೊತೆಗೆ ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಪ್ರೇರೆಪಿಸಬೇಕು ಎಂದರು.
ವಿವಿಧ ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡ ಜಾಥಾ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು , ಜಿಲ್ಲಾ ಪಂಚಾಯತ್ ಐಇಸಿ ಸಂಯೋಜಕರು ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ