ಮಂಗಳೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು ಇದರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನ.30ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಪುತ್ತೂರು ಕೊಂಬೆಟ್ಟಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ವಿವರ ನೀಡಿದರು.
ಕ್ರೀಡಾಕೂಟದಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ 100 ಮೀಟರ್ ಓಟ, ಗುಂಡು ಎಸೆತ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿಗಳು, ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಪ್ರೇರಕರು ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಸಹಕಾರ ಸಚಿವರಿಂದ ಉದ್ಘಾಟನೆ:
ಕ್ರೀಡಾಕೂಟವನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರು ಕ್ರೀಡಾಜ್ಯೋತಿ ಬೆಳಗಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ., ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ:
ಗುರುವಾರ ಅಪರಾಹ್ನ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ. ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿಗಳಾದ ಕೆ. ಸೀತಾರಾಮ ರೈ ಸವಣೂರು ಇವರು ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡುವರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಸಹಕಾಇ ಯೂನಿಯನ್ ಇದರ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಪುತ್ತೂರಿನ ರಾಮಕೃಷ್ಣ ಸರಕಾರಿ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ಜೀವಂಧರ ಜೈನ್ ಮತ್ತು ಪುತ್ತೂರು ನಗರಸಭೆಯ ಸದಸ್ಯ ಪಿ.ಜಿ ಜಗನ್ನಿವಾಸ್ ರಾವ್ ಭಾಗವಹಿಸುತ್ತಾರೆ.
ಎಸ್‌ಸಿಡಿಸಿಸಿ ಬ್ಯಾಂಕ್ ಕುರಿತು:
ಸಹಕಾರ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣೀಕ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಜೊತೆಗೆ ಸೌಹಾರ್ದಯುತವಾಗಿ ಕಾರ್ಯನಿರ್ವಹಿಸುತ್ತಿದೆ. ಅದರಲ್ಲೂ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಬ್ಯಾಂಕ್ ಮಾತೃಸಂಸ್ಥೆಯಾಗಿದೆ.
ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸದಸ್ಯರು, ಸಿಬ್ಬಂದಿಗಳನ್ನು ಹಾಗೂ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳನ್ನು ಒಂದೇ ಕಡೆ ಒಗ್ಗೂಡಿಸುವ ಉದ್ದೇಶದಿಂದ ಈ ಕ್ರೀಡಾ ಕೂಟ ಆಯೋಜಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ