ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಡಾ. ಪ್ರತಾಪ್ ಕುಮಾರ್

Upayuktha
0

ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿಯ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಹೇಳಿದರು.


ಅವರು ಸೋಮವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಹೆಣ್ಣು ಭ್ರೂಣ ಹತ್ಯೆಯಿಂದಾಗಿ ಸಮಾಜದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಗಂಡು ಹೆಣ್ಣಿನ ಅನುಪಾತದಲ್ಲಿ ಸಮತೋಲನ ಸಾಧಿಸಲು ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ನಿಯಂತ್ರಣಕ್ಕೆ ತರಬೇಕು ಎಂದರು.


ಜಿಲ್ಲಾ ಮಟ್ಟದಲ್ಲಿ ಆಗಿಂದಾಗ್ಗೆ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ಕುರಿತು ಕಾರ್ಯಾಗಾರಗಳನ್ನು ಏರ್ಪಡಿಸಿ, ಜನ ಸಾಮಾನ್ಯರು, ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು, ಅಂಗನವಾಡಿ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರುಗಳಲ್ಲಿ ಅರಿವು ಮೂಡಿಸಬೇಕು ಎಂದ ಅವರು, ಭ್ರೂಣಲಿಂಗ ಪತ್ತೆ ಮಾಡುವ ವೈದ್ಯಾಧಿಕಾರಿಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರುಗಳಿಗೆ ಹತ್ತು ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಇದೇ ಅಪರಾಧ ಪುನರಾವರ್ತನೆಯಾದಲ್ಲಿ ಐವತ್ತು ಸಾವಿರ ರೂ. ದಂಡದೊಂದಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದರು.


ಜಿಲ್ಲೆಯ ಯಾವುದೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಬೇಕು. ಒಂದು ವೇಳೆ ಭ್ರೂಣ ಲಿಂಗ ಪತ್ತೆ ಮಾಡುವ ವೈದ್ಯರುಗಳ ಮಾಹಿತಿ ನೀಡಿ, ಪ್ರಕರಣ ಸಾಬೀತಾದಲ್ಲಿ ಮಾಹಿತಿ ನೀಡಿದವರಿಗೆ 50,000 ರೂ. ಗಳ ಬಹುಮಾನ ನೀಡಲಾಗುವುದು ಎಂದರು.


ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಮಣಿಪಾಲ ಕೆ.ಎಂ.ಸಿ ಯ ಮಕ್ಕಳ ತಜ್ಞ ಡಾ. ಕಿರಣ ಹೆಬ್ಬಾರ್, ಡಾ. ಗಣೇಶ್ ಪೈ, ಡಾ. ಆಮ್ನಾ ಹೆಗ್ಡೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ. ದೀಕ್ಷಿತಾ, ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ. ಅನಿತಾ ಪ್ರಭು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top