ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಿಸಿ : ಸಚಿವೆ ಶೋಭಾ ಕರಂದ್ಲಾಜೆ

Upayuktha
0



ಉಡುಪಿ: ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.




ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66, 169 ಹಾಗೂ 169 ಎ ಗೆ ಸಂಬಂಧಿಸಿದಂತೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮೀನುಗಾರಿಕೆ ಚಟುವಟಿಕೆ ವಾಹನಗಳು ಹಾಗೂ ಪ್ರವಾಸಿಗರು ಮಲ್ಪೆ ಕಡಲ ತೀರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ರಸ್ತೆ ಕಿರಿದಾಗಿರುವ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಗುತ್ತಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯ ಜನರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು ಎಂದು ಸೂಚನೆ ನೀಡಿದರು.




ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಡುಬಿದ್ರೆ ಜಂಕ್ಷನ್ ಬಳಿ ರಸ್ತೆ ಅಪಘಾತಗಳು ಹೆಚ್ಚು ಆಗುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ಆ ವ್ಯಾಪ್ತಿಯಲ್ಲಿ ಕೈಗೊಳ್ಳುವುದರೊಂದಿಗೆ ಅಪಘಾತ ಮುಕ್ತವಾಗಿಸಬೇಕು ಎಂದರು.




ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ ರಲ್ಲಿ ಈಗಾಗಲೇ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಇವುಗಳನ್ನು ಆದ್ಯತೆಯ ಮೇಲೆ ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು. ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾಮಗಾರಿ ಕುರಿತ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವ ನಿಟ್ಟಿನಲ್ಲಿ ಬೋರ್ಡ್ನಲ್ಲಿ ನಮೂದಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ಮಳೆಗಾಲ ಆರಂಭದ ಮೊದಲು ಬಾಕಿ ಉಳಿದ ಸೇತುವೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.     



                     

ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲು ಅಗತ್ಯವಿರುವ ಕಾಮಗಾರಿಗಳಿಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಳ್ಳಬೇಕು ಎಂದರು. ಸಂತೆಕಟ್ಟೆ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿಯಲ್ಲಿ ಬಂಡೆಕಲ್ಲು ಒಡೆಯುವ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ರಸ್ತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಗಿಸುವಂತೆ ಸೂಚನೆ ನೀಡಿದರು.




ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ಕೆ.ವಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.  



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   




  

 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top