ಜಿಲ್ಲೆಯ ಯುವಜನತೆ ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ

Upayuktha
0


ಉಡುಪಿ: ಯುವಜನರಿಗೆ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ರಾಜ್ಯ ಮಟ್ಟದ  ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27 ರಂದು ಆಯೋಜಿಸಲಾಗಿದೆ. ಜಿಲ್ಲೆಯ ಯುವಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.

 

ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಅಭ್ಯರ್ಥಿಗಳ ನೋಂದಣಿ ಕುರಿತು ಹಾಗೂ ಪಿ.ಎಂ. ವಿಶ್ವಕರ್ಮ ಯೋಜನೆಯ ಅನುಷ್ಠಾನದ ಕುರಿತ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.   


ಸರಕಾರ ಪದವಿ ಹಾಗೂ ವೃತ್ತಿ ಶಿಕ್ಷಣ ಪಡೆದ ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯಮಟ್ಟ ಉದ್ಯೋಗ ಮೇಳವನ್ನು  ವಿವಿಧ 500 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳ ಸಂಯೋಗದೊಂದಿಗೆ ಆಯೋಜಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಯುವಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.


ಆಸಕ್ತ ವಿದ್ಯಾರ್ಥಿಗಳು ಉದ್ಯೋಗ ಮೇಳದ ನೋಂದಾವಣಿಯನ್ನು https://skillconnect.kaushalkar.com/ಲಿಂಕ್‌ನಲ್ಲಿ ನೋಂದಾಯಿಸಿಕೊಂಡು ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ನೇರವಾಗಿ ಭಾಗವಹಿಸಬಹುದಾಗಿದೆ ಎಂದರು. 


ಜಿಲ್ಲೆಯಲ್ಲಿ ಈವರೆಗೆ 105 ಜನ ವಿದ್ಯಾರ್ಥಿಗಳು ಮಾತ್ರ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳೀಗೆ ತಮ್ಮ ವಿದ್ಯಾರ್ಹತೆಯ ಆಧಾರದ ಮೇಲೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುವುದು. ಉದ್ಯೋಗಕ್ಕೆ ಅನುಸಾರವಾಗಿ ಸೂಕ್ತ ಸಂಭಾವನೆ ನೀಡಲಾಗುವುದು ಎಂದ ಅವರು ಯುವ ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

  

ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರ ಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. 

 

ಅರ್ಹ ಅಭ್ಯರ್ಥಿಗಳು ಆಧಾರ್ ಕಾರ್ಡ್ ಸೇರಿದಂತೆ ಮತ್ತಿತರ ಸೂಕ್ತ ದಾಖಲಾತಿಗಳೊಂದಿಗೆ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಯ್ಕೆಯಾದ ಫಲಾನುಭವಿಗಳಿಗೆ ಡಿಜಿಟಲ್ ಐ.ಡಿ ಕಾರ್ಡ್ ಹಾಗೂ ಪಿ.ಎಂ ವಿಶ್ವಕರ್ಮ ಪ್ರಮಾಣ ಪತ್ರವನ್ನು ನೀಡುವುದರ ಜೊತೆಗೆ ಮೂಲಭೂತ ಕೌಶಲ್ಯ ತರಬೇತಿ ಹಾಗೂ ಉಪಕರಣವನ್ನು ನೀಡುವುದರ ಜೊತೆಗೆ ಶೇ. 5 ರೂ ಬಡ್ಡಿ ದರದಲ್ಲಿ ಒಂದು ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಅರ್ಹರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

 

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಡಿಪ್ಲೋಮಾ  ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಗಳ ಸೇರಿದಂತೆ ಮತ್ತಿತರ ತರಬೇತಿ ಸಂಸ್ಥೆಗಳ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಬೇಕು. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

     

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ ನಾಯಕ್, ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ್, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಸರ್ಕಾರಿ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು. 



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top