ಹಾಸನ: ವೈಜ್ಞಾನಿಕ ಯುಗದಲ್ಲಿ ಬದುಕುತ್ತಿರುವ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವಿದೆ. ಯಾವುದನ್ನು ಸುಮ್ಮನೆ ಒಪ್ಪಿಕೊಳ್ಳಬಾರದು. ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನೋಭಾವ, ಪರೀಕ್ಷಾ ಮನೋಭಾವ ಹಾಗೂ ಪ್ರಯೋಗದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹಾಸನ ಜಿಲ್ಲಾ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ತಮ್ಮಣ್ಣ ಗೌಡ ಹೇಳಿದರು.
ನಗರದ ಎಸ್. ಆರ್. ಎಸ್ ಪ್ರಜ್ಞಾ ಶಾಲೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಆಯೋಜನೆಗೊಂಡಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ಮಕ್ಕಳಲ್ಲಿ ರಸಪ್ರಶ್ನೆ, ಪ್ರಬಂಧ, ಚರ್ಚಾ ಸ್ಪರ್ಧೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಪರೀಕ್ಷೆ, ಪ್ರಯೋಗ ಹಾಗೂ ವಿಮರ್ಶಾತ್ಮಕ ಮನೋಭಾವವನ್ನು ಬೆಳೆಸಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎನ್ನುತ್ತಾ ತಂದೆ ತಾಯಿಗಳಿಗೆ ಒಳ್ಳೆಯ ಮಕ್ಕಳಾಗುವ ಮೂಲಕ ವಿಶ್ವ ಮಾನವರಾಗಿ ಬೆಳೆಯಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ಯಾರಂಟಿ ರಾಮಣ್ಣ ರವರು ಪರಿಸರ ಸಂರಕ್ಷಣೆಯ ಕಾಳಜಿ ಇಂದು ಎಲ್ಲರ ಜವಾಬ್ದಾರಿಯಾಗಿದೆ. ಈ ಭೂಮಿ, ನೀರು, ಗಾಳಿ, ಮಣ್ಣು ಎಲ್ಲವೂ ಮುಖ್ಯ ಎನಿಸಿವೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹೊಳೆನರಸೀಪುರ ತಾಲ್ಲೂಕಿನ ಪ್ರಿಯದರ್ಶಿನಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಟಿ. ಎಲ್. ಲಿಖಿತ್ ಗೌಡರಿಗೆ ಐದು ಸಾವಿರ ರೂಪಾಯಿಗಳ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ಹಾಗೆಯೇ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಹಾಸನ ತಾಲ್ಲೂಕಿನ ಎಸ್. ಆರ್. ಎಸ್ ಪ್ರಜ್ಞಾ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು|| ತನ್ವಿಕ ರವರಿಗೆ ಒಂದು ಸಾವಿರ ರೂಪಾಯಿ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಹಲವು ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ ಪಡೆದರು. ಕೆ.ಜೆ.ವಿ. ಎಸ್. ನ ಜಿಲ್ಲಾ ಸಂಚಾಲಕರಾದ ಡಿ. ವಿಶ್ವನಾಥ್ ರವರು ಕಾರ್ಯಕ್ರಮವನ್ನು ನಿರೂಪಿಸಿ ಎಲ್ಲರನ್ನು ವಂದಿಸಿದರು. ಶಾಲೆಯ ಶಿಕ್ಷಕರಾದ ಶಿವಾನಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ