ಲೋಕಸಭಾ ಚುನಾವಣೆಯ ಕಾರ್ಯಗಳನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಿ ಉಡುಪಿ ಡಿಸಿ ಸೂಚನೆ

Upayuktha
0

ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆ


ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.


ಅವರು ಸೋಮವಾರ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 

    

ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪ್ರತಿಶತಃ ನೂರರಷ್ಟು ಮತದಾನ ನಡೆಯುವಲ್ಲಿ ಸಹಕರಿಸಬೇಕು ಎಂದರು. 

    

ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶಾಲಾ- ಕಾಲೇಜುಗಳ ಗೋಡೆಯ ಮೇಲಿನ ಬರಹ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿರುವ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಹೋರ್ಡಿಂಗ್ಸ್ಗಳನ್ನು ತೆರವುಗೊಳಿಸಬೇಕು. ವಿವಿಧ ಇಲಾಖೆಗಳ ವೆಬ್‌ಸೈಟ್ ಹಾಗೂ ಸಾಮಾಜಿಕ ತಾಣಗಳಲ್ಲಿ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಸಂಬಂಧ ಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.


ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣೆ ಕುರಿತು ಅರಿವು ಮೂಡಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಿ, ಮತದಾರರು ಹೆಚ್ಚಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕ್ರಮ ವಹಿಸಬೇಕು ಎಂದ ಅವರು, ಜಾಗೃತಿ ಮೂಡಿಸಲು ಹಂಚಿಕೆ ಮಾಡಲಾದ ಇ.ವಿ.ಎಂ ಮೆಷಿನ್ ಗಳನ್ನು ಹಿಂಪಡೆದು ಕೊಳ್ಳುವಂತೆ ತಿಳಿಸಿದರು.

   

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು. ವಿಕಲಚೇತನರು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಮತದಾನ ಕೇಂದ್ರಗಳಲ್ಲಿ ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಅಗತ್ಯವಿದ್ದಲ್ಲಿ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. 

    

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಎಂಸಿಎಂಸಿ ತಂಡಗಳು ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ವಾಡ್‌ಗಳು, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಜಾಗೃತರಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

  

ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಬೇಕು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು. ಈ ಸಂಬAಧ ಯಾವುದೇ ಗೊಂದಲಕ್ಕೆ ಒಳಗಾಗದೇ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

   

ಆಂತರಿಕ ಪ್ರದೇಶಗಳಲ್ಲಿ ಗಾಂಜಾ ಹಾಗೂ ಕಳ್ಳಭಟ್ಟಿ ಸಾಗಾಟ ಸೇರಿದಂತೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಅರಣ್ಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದ ಅವರು, ಬಂದರುಗಳಿಗೆ ಆಗಮಿಸುವ ಬೋಟುಗಳ ತಪಾಸಣೆಯನ್ನು ಸಹ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಸೂಚನೆ ನೀಡಿದರು. 

    

ಚೆಕ್‌ಪೋಸ್ಟ್ ಸ್ಥಾಪನೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಈಗಲೇ ಕಾರ್ಯಪ್ರವೃತ್ತವಾಗಬೇಕು ಹಾಗೂ ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು. 

    

ಚುನಾವಣಾ ಘೋಷಣೆ ನಂತರ ಯಾವುದೇ ಹೊಸದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಟೆಂಡರ್ ಪ್ರಕಟಣೆಯನ್ನು ಹೊರಡಿಸಬಾರದು. ಈಗಾಗಲೇ ಚುನಾವಣೆ ಘೋಷಣೆ ಪೂರ್ವದಲ್ಲಿ ಕಾರ್ಯಾದೇಶ ನೀಡಿ, ಚಾಲ್ತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂದರು. 

   

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಎಫ್‌ಓ ಗಣಪತಿ, ಕರಾವಳಿ ಕಾವಲು ಪಡೆಯ ಎಸ್‌ಪಿ ಮಿಥುನ್ ಹೆಚ್.ಎನ್, ಡೈರೆಕ್ಟರ್ ಐ.ಟಿ ಹಾಗೂ ಉಡುಪಿ ಡಿ.ಐ.ಒ ಮಂಜುನಾಥ್, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top