ಮಂಗಳೂರು: ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ ಪಾಲ್ಗೊಳ್ಳಬೇಕಾದ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಪರ ಜಿಲ್ಲಾಧಿಕಾರಿ ಹಾಗೂ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಿರಿಯ ಸಲಹೆಗಾರ ಪ್ರಭಾಕರ ಶರ್ಮಾ ತಿಳಿಸಿದ್ದಾರೆ.
ಅವರು ಇಂದು ನಗರದ ಲಾಲ್ ಬಾಗ್ ವನಿತಾ ಪಾರ್ಕ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಬ್ಯಾಂಕ್ ಆಫ್ ಬರೋಡಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಜೀವ-ಜಲ ಉಳಿಸಿ ಅಭಿಯಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.
ನಗರದಲ್ಲಿ ಕಾಂಕ್ರೀಟ್ ಕಟ್ಟಡಗಳು ಸೇರಿದಂತೆ ವಿವಿಧ ಕಾಮಗಾರಿಗಳ ಸಂದರ್ಭದಲ್ಲಿ ಪರಿಸರದ ಮೇಲೆ ಆಕ್ರಮಣ ನಡೆಯುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮಿತಿಯಲ್ಲಿ ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಗೆ ಭವಿಷ್ಯದ ದೃಷ್ಟಿಯಿಂದ ಕೊಡುಗೆ ನೀಡುವ ಅಗತ್ಯವಿದೆ ಎಂದು ಪ್ರಭಾಕರ ಶರ್ಮಾ ಮನವಿ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ಜಯರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಈ ಬೇಸಗೆಯ ಸಂದರ್ಭದಲ್ಲಿ ಪ್ರಾಣಿ, ಪಕ್ಷಿಗಳ ಜೀವ ರಕ್ಷಣೆಯ ಜೊತೆಗೆ ನೀರನ್ನು ಮಿತವಾಗಿ ಬಳಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವಜನಿಕರು ಜೀವ-ಜಲ ಅಭಿಯಾನದ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಸಕಲ ಜೀವ ರಾಶಿಗಳಿಗೆ ಆಧಾರವಾದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಿಭಾಗದ ಹಿರಿಯ ಪ್ರಬಂಧಕರಾದ ಎಡ್ರಿಚ್ ಡಿ ಸೋಜ, ಮುಖ್ಯ ಪ್ರಬಂಧಕ ಸತೀಶ್ ಪಾಟ್ಕರ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದ.ಕ ಜಿಲ್ಲೆ, ದೇವಿಕಾ ಯೋಗ ತರಬೇತಿ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ, ಇನ್ನರ್ ವ್ಹೀಲ್ ಕ್ಲಬ್ ಮಂಗಳೂರು ನಾರ್ತ್ ನ ಅಧ್ಯಕ್ಷೆ ಗೀತಾ ಬಿ.ರೈ, ನಿಕಟ ಪೂರ್ವ ಅಧ್ಯಕ್ಷೆ ವಸಂತಿ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸತೀಶ್ ಇರಾ ಸೇರಿ ದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ