ದೇರಳಕಟ್ಟೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ
ಮಂಗಳೂರು: ನಮಗೆ ಉಚಿತವಾಗಿ ದೊರೆಯುವ ನೈಸರ್ಗಿಕ ಸಂಪನ್ಮೂಲದ ಸಂರಕ್ಷಣೆಯೂ ನಮ್ಮೆಲ್ಲರ ಹೊಣೆಗಾರಿಕೆಯಾಗಬೇಕು ಎಂದು ಅರಣ್ಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಶ್ರೀಧರ್ ತಿಳಿಸಿದರು.
ಅವರು ಇಂದು ದೇರಳಕಟ್ಟೆಯ ರತ್ನ ಎಜುಜೇಶನ್ ಟ್ರಸ್ಟ್ ನ ವತಿಯಿಂದ ನಡೆಯುತ್ತಿರುವ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ದಕ್ಷಿಣ ಕನ್ನಡ ಅರಣ್ಯ ಇಲಾಖೆ, ನೆಲ್ಲಿಗುಡ್ಡೆ ಪರಿಸರ ಅಧ್ಯಯನ ಕೇಂದ್ರ, ವಿದ್ಯಾರತ್ನ ಶಿಕ್ಷಣ ಸಂಸ್ಥೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಮರ ಗಿಡಗಳ ಮೂಲಕ ದೊರೆಯುವ ಶುದ್ಧವಾದ ಗಾಳಿ, ಮಳೆಯ ಮೂಲಕ ದೊರೆಯುವ ನೀರು ನಮಗೆ ಜೀವನಾಧಾರವಾಗಿದೆ. ಅದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಮ್ಮ ಬದುಕನ್ನು ಇನ್ನಷ್ಟು ಆರಾಮದಾಯಕವಾಗಿ ಮಾಡಲು ಹೊರಟು ನಾವು ನಮ್ಮ ಸುತ್ತ ಮುತ್ತಲಿನ ಪರಿಸರಕ್ಕೆ ಹಾನಿ ಮಾಡಲು ಹೊರಟಿದ್ದೇವೆ. ಆದರೆ ಇದರಿಂದ ಏರುತ್ತಿರುವ ತಾಪಮಾನ ಸಮುದ್ರದಲ್ಲಿ ನೀರಿನ ಮಟ್ಟ ಏರಿಕೆ ಹವಾಮಾನ ವೈಪರೀತ್ಯಗಳ ಸಮಸ್ಯೆ ನಮ್ಮನ್ನು ಕಾಡಲಾರಂಭಿಸಿದೆ. ಇಂತಹ ಸಂದರ್ಭದಲ್ಲಿ ಪರಿಸರವನ್ನು ಉಳಿಸಿ ಮುಂದಿನ ಜನಾಂಗದ ಒಳಿತಿಗಾಗಿ ಸಂರಕ್ಷಣೆ ಮಾಡುವ ಹೊಣೆಗಾರಿಕೆಯನ್ನು ನಾವು ವಹಿಸಿಕೊಳ್ಳಬೇಕಾಗಿದೆ ಎಂದು ಶ್ರೀಧರ್ ಮಾಹಿತಿ ನೀಡಿದರು.
ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ. ಶಾಂತರಾಮ ಶೆಟ್ಟಿ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳಿಗೆ ಬಟ್ಟೆ ಚೀಲ ಮತ್ತು ಗಿಡಗಳನ್ನು ವಿತರಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪರಿಸರ ಸಂರಕ್ಷಣೆ ಶಿಕ್ಷಣದ ಭಾಗವಾಗಬೇಕು ಈ ನಿಟ್ಟಿನಲ್ಲಿ ವೈಯಕ್ತಿಕ ಜಾಗೃತಿ ಅಗತ್ಯ ಎಂದು ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮತ್ತು ರತ್ನ ಎಜುಕೇಶನ್ ಟ್ರಸ್ಟ್ ನ ಸಂಸ್ಥಾಪಕರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡುತ್ತಾ, ನಮ್ಮ ಪರಿಸರದಲ್ಲಿ ಗಿಡಗಳನ್ನು ನೆಡುವುದು,ನಮ್ಮ ಪರಿಸರವನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ಕೆಲಸವನ್ನು ನಾವೆಲ್ಲರೂ ನಿಷ್ಠೆಯಿಂದ ಮಾಡಬೇಕಾಗಿದೆ. ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿತ ಮಾಡಬೇಕಾಗಿದೆ ಎಂದರು.
ಸಮಾರಂಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಉಳ್ಳಾಲ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ ಕೊಣಾಜೆ ಶುಭ ಹಾರೈಸಿದರು.
ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕೋಶಾಧಿಕಾರಿ ಮೋಹನ್ ಶೆಟ್ಟಿ, ವಿಶ್ರಾಂತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ, ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಸಂಚಾಲಕಿ ಸೌಮ್ಯ ಆರ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ನೈಯಿಮ್ ಹಮೀದ್ ಶೇಖ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ ಪೊಯ್ಯತಬೈಲ್ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ