ಉಜಿರೆ: ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ ಕುಂಬ್ಳೆ ಶ್ರೀಧರ ರಾವ್ ಅವರು ಸ್ತ್ರೀ ವೇಷಧಾರಿಯಾಗಿ, ಪುರುಷ ವೇಷಧಾರಿಯಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಧರ್ಮಸ್ಥಳ ಮೇಳವೊಂದರಲ್ಲಿಯೇ 50 ವರ್ಷಗಳ ಸೇವೆ ಮಾಡಿದ್ದಾರೆ. ಯಕ್ಷಗಾನಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತನ್ನ ಸಂದೇಶದಲ್ಲಿ ತಿಳಿಸಿದ್ದಾರೆ.
ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾದರು. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದರು.
ಕುಂಬ್ಳೆ ಶ್ರೀಧರ ರಾವ್ ಹಿನ್ನೆಲೆ:
1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ರವರು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಾಗಿದ್ದರು. ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಇವರು ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಸೇವೆ ಮಾಡಿದ್ದಾರೆ. ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿರುವ ಶ್ರೀಧರ ರಾವ್‌ರವರು ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು. ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅನ್ನು ದೇವಿ, ಈಶ್ವರ, ಸೀತಾ ಪರಿತ್ಯಾಗದ ಸೀತೆ, ಲಕ್ಷ್ಮಣ, ಸುದರ್ಶನ ವಿಜಯದ ಲಕ್ಷ್ಮಿ, ವಿಷ್ಣು, ದಮಯಂತಿ ಸ್ವಯಂವರದ ದಮಯಂತಿ, ಭೀಷ್ಮ ವಿಜಯದ ಅಂಬೆ, ದೇವಿ ಮಹಾತ್ಮೆಯ ದೇವಿ ಮೊದಲಾದ ಪಾತ್ರಗಳ ಮೂಲಕ ಪ್ರಸಿದ್ಧಿ ಪಡೆದಿದ್ದ ರಾವ್‌ರವರ ಅಮ್ಮು ಬಳ್ಳಾಲ್ತಿ, ದಾಕ್ಷಾಯಿಣಿ, ಲಕ್ಷ್ಮಿ ಸುಭದ್ರೆಯ ಪಾತ್ರದ ಮೂಲಕವೂ ಅಪಾರ ಅಭಿಮಾನಿಗಳನ್ನು ಪಡೆದಿದ್ದರು.
ಕೊರಗ ಶೆಟ್ರ ಇರಾ ಮೇಳದ ಮೂಲಕ ಯಕ್ಷ ಪಯಣ ಆರಂಭಿಸಿದ್ದ ಶ್ರೀಧರ ರಾವ್‌ರವರು ಯಕ್ಷಗಾನ ದಿಗ್ಗಜ ಶೇಣಿಯವರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನ ಮಾತ್ರವಲ್ಲದೆ ಇನ್ನೂ ಹಲವೆಡೆ ಇವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು. ಇತ್ತೀಚೆಗಷ್ಟೇ ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಜಸ್ಟೀಸ್ ಕೆ.ಜಗನ್ನಾಥ ಶೆಟ್ಟಿ ಸ್ಮಾರಕ ಪ್ರಯುಕ್ತ ಕೊಡ ಮಾಡುವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ