ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ವಿರುದ್ಧ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಇಂದು (ಜು.3) ಪ್ರತಿಭಟಿಸಿ ತಹಶೀಲ್ದಾರರ ಮೂಲಕ ಆಗ್ರಹಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ನಗರ ಕಾರ್ಯದರ್ಶಿ ಶ್ರೀವತ್ಸ ಇವರು, ರಾಜ್ಯಾದ್ಯಂತ ಗ್ರಾಮೀಣ ಭಾಗಗಳಿಂದ ನಗರಕ್ಕೆ ಬಂದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಲಕ್ಷದಲ್ಲಿದೆ. ಅಂತೆಯೇ ಮುಖ್ಯವಾಗಿ ಉಡುಪಿಯಂತಹ ನಗರಕ್ಕೆ ಶಿಕ್ಷಣಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹೊರ ಜಿಲ್ಲೆಯಿಂದ ಬರುತ್ತಾರೆ. ಈಗಾಗಲೇ ಹೈಸ್ಕೂಲ್ ಮತ್ತು ಪಿಯುಸಿ ತರಗತಿಗಳು ಪ್ರಾರಂಭವಾಗಿ 40 ದಿನಗಳಾಗುತ್ತಾ ಬಂದರೂ ಸಹ ಹಾಸ್ಟೆಲ್ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಮತ್ತು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಮತ್ತೊಂದೆಡೆ ವಿದ್ಯಾಸಿರಿ, ಕಾರ್ಮಿಕರ ನಿಧಿ ವಿದ್ಯಾರ್ಥಿ ವೇತನವೂ ಸಹ ಬಿಡುಗಡೆಯಾಗುತ್ತಿಲ್ಲ, ರೈತನಿಧಿ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದು ಖಂಡನೀಯ ಎಂದರು.
ತಾಲೂಕು ಸಂಚಾಲಕರಾದ ಅಜಿತ್ ಜೋಗಿ ಮಾತನಾಡಿ, 100 ವಿದ್ಯಾರ್ಥಿಗಳು ಹಾಸ್ಟೆಲ್‌ಗಾಗಿ ನೋಂದಾಯಿಸಿದರೆ ಕೇವಲ 40 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ವ್ಯವಸ್ಥೆ ಆಗುತ್ತಿದೆ. ಇನ್ನು ಉಳಿದ 60 ವಿದ್ಯಾರ್ಥಿಗಳು ನಮ್ಮ ರಾಜ್ಯದ ಬೀದಿಗಳಲ್ಲಿ ಮಲಗಬೇಕೆ? ಎಂದು ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಸಚಿವರಿಗೆ ಚಾಟಿ ಬೀಸಿದರು.
ಪ್ರಮುಖ ಬೇಡಿಕೆಗಳು:
- ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲ್‌ಗಳಿಗೆ ಪ್ರವೇಶಾತಿ ನೀಡಬೇಕು.
- ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು.
- ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು.
ಪ್ರತಿಭಟನೆಯಲ್ಲಿ ವಿಭಾಗ ಸಂಚಾಲಕರಾದ ಗಣೇಶ್ ಪೂಜಾರಿ, ಜಿಲ್ಲಾ ಸಂಚಾಲಕರಾದ ಕಾರ್ತಿಕ್ ಎಂ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ, ನಗರ ಸಹ-ಕಾರ್ಯದರ್ಶಿಗಳಾದ ಭಾವನಾ ಸೇರಿದಂತೆ ಪ್ರಮುಖರಾದ ಭೂಷಣ್, ಮನು, ಮಾಣಿಕ್ಯ, ಸ್ವಸ್ತಿಕ್, ನವೀನ್, ಅನಂತಕೃಷ್ಣ ಮತ್ತಿತರರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ