ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ಅವಕಾಶ ಕಲ್ಪಿಸಿ : ಉಡುಪಿ ಡಿಸಿ

Upayuktha
0


ಉಡುಪಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.


ಅವರು ಗುರುವಾರ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭನವ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಪ್ರಕೃತಿಯ ಅಸಮತೋಲನಕ್ಕೆ ಮುಖ್ಯ ಕಾರಣ ಮನುಷ್ಯ. ಆತನ ಅಭಿವೃದ್ಧಿಯ ವೇಗದಿಂದಾಗಿ ಪ್ರಕೃತಿ ನಲುಗಿಹೋಗುತ್ತಿದೆ. ಪರಿಸರ ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕರರ ಜವಾಬ್ದಾರಿಯಾಗಿದ್ದು, ಪರಿಸರ ಉಳಿಸುವುದರೊಂದಿಗೆ ಸಕಲ ಜೀವಿಗಳ ಉಳಿವಿಗೆ ಕಾರಣರಾಗಿ ಎಂದ ಅವರು, ಮಕ್ಕಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು. ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್ ಮಾತನಾಡಿ, ಮಕ್ಕಳಲ್ಲಿ ಅವರದ್ದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ, ಪ್ರೇರೇಪಿಸುವ ಕೆಲಸವನ್ನು ಪೋಷಕರು ಮಾಡಬೇಕು ಎಂದ ಅವರು, ಪ್ರಕೃತಿಯ ಮಹತ್ವದ ಕುರಿತು ಮಕ್ಕಳಿಗೆ ಪರಿಚಯ ಮಾಡಿಸಬೇಕು. ಇದರಿಂದ ಪರಿಸರವನ್ನು ಉಳಿಸಿ-ಬೆಳೆಸುವಲ್ಲಿ ಅವರುಗಳು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ ಎಂದರು.


ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಮಕ್ಕಳ ಕೊಡುಗೆ ಅಪಾರ, ಹೊಸ ಹೊಸ ಆವಿಷ್ಕಾರಗಳಿಗೆ ತೆರೆದುಕೊಳ್ಳಲು ಮಕ್ಕಳಿಗೆ ಪೂರಕ ವಾತಾವರಣ ಕಲ್ಪಿಸಬೇಕು. ಅವರ ಅಭಿರುಚಿಗಳನ್ನು ಪುರಸ್ಕರಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು, ಗುರು-ಹಿರಿಯರು ಮಾಡಬೇಕು ಎಂದರು. 


ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಕ್ಕಳು ಪೋಷಕರನ್ನು ಪರೀತಿಸಿ, ಗುರು-ಹಿರಿಯರನ್ನು ಗೌರವಿಸಿ, ದೇಶದ ಸತ್ಪçಜೆಗಳಾಗಿ ಬಾಳಿ ಎಂದು ಶುಭ ಹಾರೈಸಿದರು. 


ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್, ಮಕ್ಕಳ ವಾರ್ಡ್ ಕ್ಲಬ್‌ನ ಅಧ್ಯಕ್ಷೆ ಕು. ಸುಮನಾ, ಶಾಲಾ ಮಕ್ಕಳು, ಶಿಕ್ಷಕರು, ತೀರ್ಪುಗಾರರು, ಬಾಲಭನದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಸ್ವಾಗತಿಸಿ, ದೀಪಾ ನಿರೂಪಿಸಿದರೆ, ಶ್ವೇತಾ ವಂದಿಸಿದರು. 


ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆ, ಹಾಗೂ ವಾದ್ಯ ಸಂಗೀತ ಸ್ಪರ್ಧೆಗಳು ನಡೆದವು.  ಮಕ್ಕಳು ರಚಿಸಿದ ಕ್ರಾಫ್ಟ್ ಅನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top