ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನ್ಯಾಯ: ಶಾಸಕ ಕಾಮತ್

Upayuktha
0



ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಅನ್ಯಾಯವೆಸಗುತ್ತಲೇ ಬಂದಿದೆ. ಇದನ್ನು ಕೊನೆಗಾಣಿಸಲೇಬೇಕಾದ ಸಮಯ ಬಂದಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದ ವರ್ಗಗಳ ಸಮುದಾಯದ ಜನರ ಕಲ್ಯಾಣ, ಸಬಲೀಕರಣಕ್ಕಾಗಿ ನಾನಾ ಸರಕಾರಗಳು ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಾ ಬಂದಿವೆ. ಅದರಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳು ಕಾರ್ಯ ನಿರ್ವಹಿಸುತ್ತಿವೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 1,000 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ವಿವಿಧ ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹೊಸ ಅನುದಾನವನ್ನು ನೀಡುವುದು ಬಿಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಡುಗಡೆಗೊಳಿಸಲಾಗಿದ್ದ ಕೋಟ್ಯಾಂತರ ರೂಪಾಯಿ ಅನುದಾನಗಳನ್ನೂ ಸಹ ರದ್ದುಪಡಿಸುವ ಆದೇಶ ಹೊರಡಿಸಿರುವುದು ಅತ್ಯಂತ ಖಂಡನೀಯ. ಇದು ರಾಜ್ಯದಲ್ಲಿ ಹಿಂದುಳಿದ ವರ್ಗದವರನ್ನು ಮುನ್ನಲೆಗೆ ಬರಲು ಬಿಡದೇ ಹಿಂದುಳಿದವರಾಗಿಯೇ ಉಳಿಸುವ ಷಡ್ಯಂತ್ರವಾಗಿದ್ದು ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಅಹಿಂದ ವರ್ಗಕ್ಕೇ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.


ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಸಮುದಾಯ ಭವನ, ಸಂಘ ಸಂಸ್ಥೆ, ವಿದ್ಯಾರ್ಥಿ ನಿಲಯ ಸೇರಿದಂತೆ ರಾಜ್ಯದಾದ್ಯಂತ ಸುಮಾರು 1093 ಹಿಂದುಳಿದ ವರ್ಗಗಳ ಕಾಮಗಾರಿಗಳಿಗೆ ನೀಡಲಾಗಿದ್ದ ಸಾವಿರಾರು ಕೋಟಿ ರೂಪಾಯಿ ಅನುದಾನದ ಮಂಜೂರಾತಿಯನ್ನು ಪ್ರಸ್ತುತ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ರದ್ದುಪಡಿಸಿದೆ (ದಾಖಲೆಗಳನ್ನು ಲಗತ್ತಿಸಲಾಗಿದೆ). ಅದರಲ್ಲಿ ನಮ್ಮ ಜಿಲ್ಲೆಯ ಕಾಮಗಾರಿಗಳು ಸಹ ಸೇರಿಕೊಂಡಿದ್ದು ದೇವಾಡಿಗ, ಕುಡುಬಿ, ಮೊಗವೀರ, ಬಿಲ್ಲವ, ಶೆಟ್ಟಿಗಾರ್ ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯದ ಏಳಿಗೆಯನ್ನೇ ಕಡೆಗಣಿಸಲಾಗಿದೆ. ಎಲ್ಲಾ ಹಣ ಗ್ಯಾರೆಂಟಿಗೆ ಬಳಕೆಯಾಗುತ್ತಿದೆ, ಹಾಗಾಗಿ ಹೊಸ ಅನುದಾನ ಕೇಳಬೇಡಿ ಎನ್ನುವ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೂ ಕೊಕ್ಕೆ ಹಾಕುತ್ತಿರುವುದು ಯಾಕೆ? ಈ ಬಗ್ಗೆ ಕಾಂಗ್ರೆಸಿನಲ್ಲೇ ಇರುವ ಹಿಂದುಳಿದ ವರ್ಗಗಳ ನಾಯಕರು ಯಾಕೆ ಮೌನ ವಹಿಸಿದ್ದಾರೆ? ಎಂದು ತರಾಟೆಗೆ ತೆಗೆದುಕೊಂಡರು.



ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಹೀಗೆ ಹತ್ತು ಹಲವು ನಿಗಮಗಳ ಮೂಲಕ ಸಾಂಪ್ರದಾಯಿಕ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಕಾಯಕ ಕಿರಣ, ಅರಿವು, ಹೊಲಿಗೆ ಯಂತ್ರ ಇಂತಹ ಹತ್ತು ಹಲವು ಯೋಜನೆಗಳ ಮೂಲಕ ಹಿಂದುಳಿದ ಸಮುದಾಯಗಳ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಿ ಸ್ವಾವಲಂಬಿ ಬದುಕಿಗಾಗಿ ನೆರವು ನೀಡಲಾಗುತ್ತಿತ್ತು. ಆದರೆ ಈಗಿನ ಸರಕಾರ ಅದರಲ್ಲೂ ಫಲಾನುಭವಿಗಳ ಸಂಖ್ಯೆಯನ್ನು ಕಡಿತ ಮಾಡಿ ಸಮುದಾಯಕ್ಕೆ ಅನ್ಯಾಯವೆಸಗುತ್ತಿದೆ ಎಂದರು.



ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೆಸರಿಗೆ ಮಾತ್ರ ಬಜೆಟ್ ನಲ್ಲಿ 1600 ಕೋಟಿ ಘೋಷಣೆ ಮಾಡಿತ್ತು. ಆದರೆ ಈವರೆಗೆ ಕೇವಲ ಸಣ್ಣಪುಟ್ಟ ಅನುದಾನಗಳನ್ನು ಮಾತ್ರ ನೀಡಿ ಹಿಂದುಳಿದ ವರ್ಗಗಳ ಜನರ ಆರ್ಥಿಕ, ಔದ್ಯೋಗಿಕ, ಕೃಷಿ, ಮತ್ತು ಶಿಕ್ಷಣಕ್ಕಾಗಿ ಯಾವುದೇ ನಿಗಮಗಳಿಗೆ ಅನುದಾನ ಬಿಡುಗಡೆ ಮಾಡದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇದು ಹಿಂದುಳಿದ ವರ್ಗದವರಿಗೆ ರಾಜ್ಯ ಸರ್ಕಾರ ಮಾಡುತ್ತಿರುವ ಘೋರ ಅನ್ಯಾಯ. ಅಲ್ಲದೇ ರಾಜ್ಯದ ಹಿಂದುಳಿದ ವರ್ಗಗಳ ಸುಮಾರು 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಕ್ಕಾಗಿ ವಿವಿಧ ನಿಗಮಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ನಯಾ ಪೈಸೆ ಹಣ ಬಿಡುಗಡೆಯಾಗದೇ ಆ ವಿದ್ಯಾರ್ಥಿಗಳಿಗೂ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ಹಿಂದೆ ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ನೂರಾರು ಕೋಟಿ ರೂಪಾಯಿಗಳನ್ನು ತನ್ನ ಸ್ವಾರ್ಥಕ್ಕಾಗಿ ಬೇರೆಡೆಗೆ ವರ್ಗಾಯಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಹಿಂದುಗಳಿದ ವರ್ಗಗಳ ನಿಗಮಗಳಿಗೂ ಅದೇ ಅನ್ಯಾಯ ಮುಂದುವರಿಸಿದೆ ಎಂದು ಟೀಕಿಸಿದರು.


ಈ ಹಿಂದೆ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಎಂದು ಮಂಗಳೂರಿನಿಂದ ವಿಧಾನಸೌಧವರೆಗೆ ಪಾದಯಾತ್ರೆ ಮಾಡಿದ್ದವರು, ಈಗ ನಾರಾಯಣ ಗುರು ನಿಗಮಕ್ಕೆ ಈವರೆಗೆ ಅಧ್ಯಕ್ಷನೂ ನೇಮಕವಾಗಿಲ್ಲ, ಅನುದಾನವೂ ನೀಡಲಾಗಿಲ್ಲ,  ಆದರೂ ಮೌನವಾಗಿದ್ದಾರೆ. ಬಂಟರ ನಿಗಮದ ಸ್ಥಿತಿಯೂ ಅದೇ ರೀತಿ ಇದ್ದು ಯಾವುದೇ ಸಕಾರಾತ್ಮಕ ಬೆಳವಣಿಗೆ ಇಲ್ಲ. ಕೂಡಲೇ ಈ ಅನ್ಯಾಯವನ್ನು ಸರಿಪಡಿಸಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಗಳ ಸಹಿತ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದರು.


ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಉಪಮೇಯರ್ ಭಾನುಮತಿ, ಪೂರ್ಣಿಮಾ, ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top