ತಂಬಾಕು ದುಷ್ಪರಿಣಾಮ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ

Upayuktha
0

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡಿಸಿ ಮಹಮ್ಮದ್ ಝುಬೇರ್ ಸೂಚನೆ.



ಬಳ್ಳಾರಿ: ಜಿಲ್ಲೆಯಲ್ಲಿ ತಂಬಾಕು ಬಳಕೆ ಗಣನೀಯ ನಿಯಂತ್ರಣಕ್ಕಾಗಿ ಶಾಲಾ ಕಾಲೇಜುಗಳು ಸೇರಿದಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಜಾರಿಗೆ ತರಬಹುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು. ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವು ಸಹ ತಂಬಾಕು ಉತ್ಪನ್ನಗಳನ್ನು ಉಪಯೋಗಿಸುತ್ತಿದ್ದಾರೆ. ಇದರಿಂದ ಅವರ ಭವಿಷ್ಯವು ಹಾಳಾಗುತ್ತಿದ್ದು, ಇದರ ಕುರಿತು ಜಿಲ್ಲಾ ಪಂಚಾಯತ್ ಹಾಗೂ ಇತರೆ ಇಲಾಖೆಗಳ ಸಹಕಾರದೊಂದಿಗೆ ಹಳ್ಳಿಗಳಲ್ಲಿಯೂ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಸೂಚಿಸಿದರು.


ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಮುಂಭಾಗದಲ್ಲಿ ಕೋಟ್ಪಾ-2003ರ ಸೆಕ್ಷನ್-4 ಮತ್ತು ಸೆಕ್ಷನ್-6ಬಿ ನಾಮಫಲಕಗಳನ್ನು ಕಡ್ಡಾಯವಾಗಿ ಆಳವಡಿಸಬೇಕು ಎಂದು ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲೆಯಲ್ಲಿ ಹಲವಾರು ರೀತಿಯ ಕೈಗಾರಿಕೆಗಳಿವೆ. ಈಗಾಗಲೇ ಸಾಕಷ್ಟು ವಿವಿಧ ರೀತಿಯಲ್ಲಿ ಮಾಲಿನ್ಯವಾಗುತ್ತಿದ್ದು, ತಂಬಾಕು ಬಳಕೆಯಿಂದ ಶ್ವಾಸಕೋಶ ಸಂಬಂಧಿತ ರೋಗಗಳು ಬರುತ್ತಿದ್ದು, ಕೈಗಾರಿಕೆ ವಲಯಗಳಲ್ಲಿಯೂ ಸಹ ತಂಬಾಕು ಕುರಿತಾಗಿ ಅರಿವು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಮಾತನಾಡಿ, ಬಳ್ಳಾರಿ ನಗರದ ಆಂಧ್ರಾಳ್ ಬೈಪಾಸ್ ರಸ್ತೆಯ ವಿಕ್ಟೋರಿಯಾ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಧೂಮಪಾನ ಪ್ರದೇಶ ಸ್ಥಾಪಿಸಿದ್ದು, ಆದರೆ ಸರಿಯಾಗಿ ನಿರ್ವಹಣೆ ಮಾಡಿರುವುದಿಲ್ಲ ಎಂದು ಸಭೆಗೆ ತಿಳಿಸಿದರು. ಈ ಕುರಿತು ಕೂಡಲೇ ನೋಟಿಸ್ ಜಾರಿ ಮಾಡಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಜಿಲ್ಲೆಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ನಾಮಫಲಕ ಅಳವಡಿಸುವುದರ ಜೊತೆಗೆ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ಅಬಕಾರಿ ಇಲಾಖೆಯವರಿಗೆ ಸೂಚನೆ ನೀಡಿದರು.


ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಬೇಕು ಎಂದು ಸೂಚಿಸಿದ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು, ಬಸ್‌ಗಳ ಮೇಲೆ ಅಂಟಿಸಲಾಗಿರುವ ತಂಬಾಕು ಉತ್ಪನ್ನಗಳಾದ ಪಾನ್ ಮಸಾಲ ಬಳಕೆಯ ಪ್ರಚೋದಕ ಜಾಹೀರಾತುಗಳನ್ನು ಹಾಕಲು ಅನುಮತಿ ಯಾರು ನೀಡಿದರು? ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಖಾಸಗಿಯವರಾಗಿದ್ದರೂ ಅವರೊಂದಿಗೆ ಚರ್ಚಿಸಿ ಕೂಡಲೇ ತೆರವುಗೊಳಿಸಲು ನಿರ್ದೇಶನ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಾಟಕ ಕಾರ್ಯಕ್ರಮವಾದ ‘ತಿಂಗಳು ಸೊಬಗು’ ಕಾರ್ಯಕ್ರಮದಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಅರಿವು ಮೂಡಿಸಲು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮನ್ವಯತೆ ಸಾಧಿಸಿ ಎಂದು ಅಪರ ಜಿಲ್ಲಾಧಿಕಾರಿಯವರು ಸಲಹೆ ನೀಡಿದರು.ಈ ಬಾರಿಯ ಜಿಲ್ಲೆಯ ತಂಬಾಕು ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಈ ಕುರಿತು ಕ್ರಮ ವಹಿಸಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚಿಸಿದರು.


ಸಭೆಯಲ್ಲಿ ಕೋಟ್ಪಾ-2003ರ ಕಾಯ್ದೆಯ ಸೆಕ್ಷನ್-4, ಮತ್ತು ಸೆಕ್ಷನ್ 6ಎ ರ ಕಾನೂನಿನ ಬಗ್ಗೆ ಮತ್ತು ವಿಧಿಸುವ ದಂಡ, ಅಂಗಡಿಯವರು ಹಾಕಬೇಕಾದ ಬೋರ್ಡ್ಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top