ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಮೇ 12 ರಂದು ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.ಸೋಮವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಭಗವಾನ್ ಬುದ್ಧನ ಜಯಂತಿ ಕಾರ್ಯಕ್ರಮವನ್ನು ಆಚರಿಸಲು ರಾಜ್ಯ ಸರ್ಕಾರದ ನಿರ್ದೇಶನವಿದ್ದು, ಜಿಲ್ಲಾ ಕೇಂದ್ರದಲ್ಲಿ ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮೇ 12 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದ್ದು, ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ಆಸನಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂದು ಸಂಜೆ 04.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನ-ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತ-ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ.
ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಬುದ್ಧ ಗಾಯನ ಕಾರ್ಯಕ್ರಮ ಏರ್ಪಡಿಸಲಾಗುವುದು. ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.
ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಬುದ್ಧ ವಿಹಾರ ಧ್ಯಾನ ಕೇಂದ್ರ ಆರಂಭಿಸಬೇಕು ಎಂದು ಸಭೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ