ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ 3 ರಿಂದ 4 ಲಕ್ಷ ಜನ ಭಾಗವಹಿಸುವ ನಿರೀಕ್ಷೆ

Chandrashekhara Kulamarva
0


ಬಳ್ಳಾರಿ:  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸುಮಾರು 3 ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ತಿಳಿಸಿದರು.


ಅವರು ನಗರದ ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ, ಮುಖ್ಯಮಂತ್ರಿಗಳು ರಾಜ್ಯದ 3 ಲಕ್ಷ ಕೋಟಿ ಬಜೆಟ್ ನಲ್ಲಿ ಐದು ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ ಹಣ ಮೀಸಲು ಇರಿಸಿದ್ದಾರೆ. ಉಳಿದ ಹಣ ಅಭಿವೃದ್ಧಿ ಕಾರ್ಯಗಳಿಗೆ ಕ್ರೋಢೀಕರಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿಲ್ಲ. ಎಲ್ಲೂ ಹಣ ಪೋಲಾಗದಂತೆ ರಾಜ್ಯದ ಅಭಿವೃದ್ಧಿಗೆ ವ್ಯಯಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರು ನಮ್ಮ ಕಾಂಗ್ರೆಸ್ ಸರ್ಕಾರವನ್ನು ಮೆಚ್ಚಿಕೊಂಡಿದ್ದಾರೆ ಎಂದರು.


ರಾಜ್ಯದ ಜನರಿಗೆ ಯೋಜನೆ ತಲುಪಿದ ಹಿನ್ನೆಲೆಯಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು ಒಂದು ಲಕ್ಷ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ. ಸಮರ್ಪಣೆ ಸಂಕಲ್ಪ ಹೆಸರಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಏನೇನು ಅಭಿವೃದ್ಧಿ ಕೆಲಸ ಕಾರ್ಯ ಯೋಜನೆ ಹಾಕಿಕೊಳ್ಳಲಾಗಿದೆ? ಎನ್ನುವ ಕುರಿತು ಜನರಿಗೆ ತಿಳಿಸಲಾಗುತ್ತದೆ ಎಂದರು.


ಅದು ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಹಾಗೂ ಕ್ಯಾಬಿನೆಟ್ ದರ್ಜೆ ಸಚಿವರು ಭಾಗವಹಿಸಲಿದ್ದಾರೆ.


ಬಿಜೆಪಿಯವರಿಗೆ ಇದೇವೇಳೆ ಟಾಂಗ್ ನೀಡಿದ ಅವರು, ನೀವು ಏನು ಕೆಲಸ ಮಾಡಿಲ್ಲ. ನೀವು ಹೇಳಿದ ಸುಳ್ಳುಗಳನ್ನು ರಾಜ್ಯದ ಜನರು ನಂಬುವ ಸ್ಥಿತಿಯಲ್ಲಿಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಸುಮಾರು 5000 ಕೋಟಿ ಅನುದಾನ ಮೀಸಲಿರಿಸಿದ್ದು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಬಳ್ಳಾರಿ ಜಿಲ್ಲೆಗೆ ಇಲ್ಲಿನ ಜನಪ್ರತಿನಿಧಿಗಳೂ ಅತಿ ಹೆಚ್ಚು ಅನುದಾನ ತಂದಿದ್ದಾರೆ. ಎಲ್ಲ ರೀತಿಯ ನಾಗರಿಕ ಸೌಲಭ್ಯಗಳು ನಮ್ಮ ಸರ್ಕಾರದಿಂದ ದೊರೆಯುತ್ತಿವೆ. - ಬಿಜೆಪಿಯವರು ವಿರೋಧ ಪಕ್ಷದ ನಾಯಕರನ್ನು ಇಡಿ ಸಿಬಿಐ ಸಂಸ್ಥೆಯ ಮೂಲಕ ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ. ದೇಶದಲ್ಲಿನ ಮಾಧ್ಯಮಗಳು ಬಿಜೆಪಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ ಹೊರತು ವಿರೋಧ ಪಕ್ಷಗಳಿಗೆ ಹೆಚ್ಚಿನ ಪ್ರಚಾರ ನೀಡುತ್ತಿಲ್ಲ ಎಂದರು. 


ಈ ಸಂದರ್ಭದಲ್ಲಿ ಮಾಜಿ ಮೇಯರ್ ರಾಜೇಶ್ವರಿ ಸುಬ್ಬರಾಯರು, ಬುಡಾ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಮಹಾನಗರ ಪಾಲಿಕೆ ಸಭಾ ನಾಯಕ ಪಿ.ಗಾದೆಪ್ಪ, ಕೆಪಿಸಿಸಿ ಮಾಧ್ಯಮ ಸಂಚಾಲಕರಾದ ವೆಂಕಟೇಶ್ ಹೆಗ್ಡೆ, ಧುರೀಣರಾದ ಚಿದಾನಂದಪ್ಪ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter





Post a Comment

0 Comments
Post a Comment (0)
To Top