ಉಡುಪಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಹೆಣ್ಣು ಮಕ್ಕಳ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪುಷ್ಠಿ ನೀಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.
ಅವರು ಸೋಮವಾರ ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ವತಿಯಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಿರುವ ಹಿನ್ನೆಲೆ, ಆಯೋಜಿಸಲಾದ ಶಕ್ತಿ ಯೋಜನೆಯ ಸಂಭ್ರಮ ಆಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಯಶಸ್ವಿಯಾಗಿ ಜಾರಿಗೊಳಿಸಿದೆ. 2023 ರ ಜೂನ್ 11 ರಂದು ಶಕ್ತಿ ಯೋಜನೆಗೆ ಮೊದಲು ಜಾರಿಗೆ ತರಲಾಗಿದ್ದು, ಅಂದಿನಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ. ಈ ಯೋಜನೆ ಜಾರಿಯಾದಾಗಿನಿಂದ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಇದರ ಲಾಭ ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸರ್ಕಾರ 12,000 ಕೋಟಿ ರೂ. ಗೂ ಹೆಚ್ಚು ಹಣ ರಾಜ್ಯ ಸಾರಿಗೆ ನಿಗಮಕ್ಕೆ ಭರಿಸಿದೆ ಎಂದರು.
ಶಕ್ತಿ ಯೋಜನೆಯ ಅನುಷ್ಠಾನದಿಂದಾಗಿ ಹೆಣ್ಣು ಮಕ್ಕಳು ಪ್ರಯಾಣಕ್ಕೆ ಮನೆಯ ಯಜಮಾನರ ಅವಲಂಭಿಸುವುದು ತಪ್ಪಿದಂತೆ ಆಗಿದೆ. ಹೆಣ್ಣು ಮಕ್ಕಳು ಸ್ವಂತ-ಉದ್ಯೋಗ ಹೊಂದಲು, ಶಿಕ್ಷಣವಂತರಾಗಲು ಹಾಗೂ ಮತ್ತಿತರ ದೈನಂದಿನ ಚಟುವಟಿಕೆಗಾಗಿ ಪ್ರಯಾಣಿಸಲು ಶಕ್ತಿ ಯೋಜನೆ ಸಹಕಾರಿಯಾಗಿದೆ ಎಂದ ಅವರು, ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಹೊಂದುವುದರೊಂದಿಗೆ ಸ್ವಾವಲಂಭಿಗಳಾಗಬೇಕೆಂದು ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ಮಾತನಾಡಿ, ನಮ್ಮ ಸರ್ಕಾರ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಯಶಸ್ವಿಯಾಗಿ ಕಳೆದ ಎರಡು ವರ್ಷಗಳಿಂದ ಅನುಷ್ಠಾನಗೊಳಿಸುತ್ತಿದೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರು. ಈ ಯೋಜನೆಗಳು ನಿರಂತರವಾಗಿರುತ್ತವೆ ಎಂದರು.
ಈ ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊದಲಿಗೆ ಜಾರಿಗೆ ತರುವುದರೊಂದಿಗೆ ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳು ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಒದಗಿಸಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 2023 ರ ಜೂನ್‍ನಿಂದ ಈವರೆಗೆ 2.57 ಕೋಟಿ ಗೂ ಹೆಚ್ಚು ಮಹಿಳೆಯರು ಸಂಚರಿಸಿದ್ದು, 90.10 ಕೋಟಿ ರೂ. ಭರಿಸಲಾಗಿದೆ. ಆದರೆ ರಾಜ್ಯದಲ್ಲಿ 500 ಕೋಟಿ ಗೂ ಹೆಚ್ಚು ಬಾರಿ ಮಹಿಳೆಯರು ಸಂಚರಿಸುವ ಇದರ ಪ್ರಯೋಜನ ಪಡೆದಿದ್ದಾರೆ ಎಂದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪ್ರಥಮವಾಗಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿನಿಯರು, ಅಲ್ಪಸಂಖ್ಯಾತರು ಸೇರಿದಂತೆ 500 ಕೋಟಿ ಮಹಿಳಾ ಪ್ರಯಾಣಿಕರು ಉದ್ಯೋಗ, ಶಿಕ್ಷಣ, ಧಾರ್ಮಿಕ ಕ್ಷೇತ್ರ, ಪ್ರವಾಸಿ ಸ್ಥಳಗಳಿಗೆ ಉಚಿತವಾಗಿ ಸಂಚರಿಸುವ ಮೂಲಕ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದರು.
ಕೇವಲ ಮನೆಯೊಳಗೆ ಸೀಮೀತವಾಗಿದ್ದ ಹೆಣ್ಣುಮಕ್ಕಳು ಇಂದು ಹೊರ ಪ್ರಪಂಚವನ್ನು ನೋಡಲು ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಮಹಿಳೆಯರು ಸದೃಢವಾಗಿ ಸ್ವಾವಲಂಭಿಗಳಾಗಿ ಜೀವಿಸಲು ಈ ಯೋಜನೆ ದಾರಿಮಾಡಿಕೊಟ್ಟದೆ ಎಂದ ಅವರು, ಹೆಣ್ಣು ಮಕ್ಕಳಿಗೆ ಆರ್ಥಿಕ ಸ್ವಾತಂತ್ರ್ಯ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ ಹಾಗೂ ಯುವನಿಧಿ ಯಂತಹ ಕಾರ್ಯಕ್ರಮಗಳಿಂದ ದೊರಕಿದೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ರೆಡ್‍ಕ್ರಾಸ್ ಕಾರ್ಯದರ್ಶಿ ಗಣನಾಥ ಎಕ್ಕಾರು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಿಗಮದ ಬಸ್ಸಿಗೆ ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ, ಸಿಹಿತಿಂಡಿ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ