ಪರಿಶಿಷ್ಟ ಜಾತಿ ಪಟ್ಟಿಗೆ ಕುಡುಬಿ ಸಮುದಾಯ- ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿಲ್ಲ

Upayuktha
0

ಸಂಸತ್ತಿನಲ್ಲಿ ಕ್ಯಾ. ಚೌಟ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ  ಅಠಾವಳೆ

ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸಂಸದರ ಆಗ್ರಹ


ದೆಹಲಿ: ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ(ಎಸ್‌ಸಿ) ಪಟ್ಟಿಯಲ್ಲಿ ಸೇರಿಸಲು ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಯಾವುದೇ ಶಿಫಾರಸು ಬಂದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.


ಕುಡುಬಿ ಸಮಾಜವನ್ನು ಎಸ್‌ಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಕ್ಕೆ ಬಂದಿರುವ ಪ್ರಸ್ತಾವನೆ ಹಾಗೂ ಈ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ-ಗತಿಗಳ ಕುರಿತು ನಡೆಸಿರುವ ಅಧ್ಯಯನ ವಿಚಾರವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಶಿಫಾರಸು ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 


ಪರಿಶಿಷ್ಟ ಜಾತಿಗಳನ್ನು ಸಂವಿಧಾನದ 341ನೇ ವಿಧಿಯ ನಿಬಂಧನೆಗಳ ಅಡಿಯಲ್ಲಿ ಸೂಚಿಸಲಾಗುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಸೇರ್ಪಡೆ ಅಥವಾ ಹೊರಗಿಡುವಿಕೆ ಮತ್ತು ಇತರ ಮಾರ್ಪಾಡುಗಳಿಗಾಗಿ, ಅಸ್ತಿತ್ವದಲ್ಲಿರುವ ಪರಿಶಿಷ್ಟ ಜಾತಿಗಳ ಪಟ್ಟಿಯನ್ನು ಪರಿಷ್ಕರಿಸಲು ಆ ಜನಾಂಗದ ಅಧ್ಯಯನದೊಂದಿಗೆ ಸಂಪೂರ್ಣ ಪ್ರಸ್ತಾವನೆಯನ್ನು ಸಂಬಂಧಪಟ್ಟ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ನೀಡಬೇಕು. 


ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗಳ ಮೊದಲ ಪಟ್ಟಿಯನ್ನು ರಾಷ್ಟ್ರಪತಿಗಳ ಆದೇಶದ ಮೂಲಕ ಸೂಚಿಸಲಾಗುತ್ತದೆ. ಅದರಲ್ಲಿ ಯಾವುದೇ ಆ ನಂತರದ ಮಾರ್ಪಾಡುಗಳನ್ನು ಸಂಸತ್ತಿನ ಕಾಯ್ದೆ ಮೂಲಕ ಮಾತ್ರ ಮಾಡಬಹುದು.  ಆದರೆ ಕುಡುಬಿ ಸಮಾಜವನ್ನು ಎಸ್‌ಸಿ ಪಟ್ಟಿಗೆ ಸೇರ್ಪಡೆಗೆ ಪರಿಗಣಿಸಲು ಈವರೆಗೆ ಕರ್ನಾಟಕ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಉತ್ತರಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ, ಅವಿಭಜಿತ ದಕ್ಷಿಣ ಕನ್ನಡಲ್ಲಿ ಸುಮಾರು 70000 ಜನಸಂಖ್ಯೆಯನ್ನು ಹೊಂದಿರುವ ಕುಡುಬಿ ಸಮುದಾಯವು  ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು, ಈ ಸಮುದಾಯ ಸಂವಿಧಾನದತ್ತ ಹಕ್ಕನ್ನು ಕಳೆದ 70 ವರ್ಷಗಳಿಂದ ಕಳೆದುಕೊಂಡಿದೆ. ಇದರಿಂದ ಈ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಿನ್ನಡೆಯುಂಟಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಈ ಕುರಿತು ಗಮನಹರಿಸಿ ತುರ್ತಾಗಿ ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top