ಜನವರಿ 29ರಿಂದ ಫೆಬ್ರವರಿ 1ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮವನ್ನು 2026ರ ಜನವರಿ 29ರಿಂದ ಫೆಬ್ರವರಿ 1ರವರೆಗೆ ನಾಲ್ಕು ದಿನಗಳ ಕಾಲ ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಶಾಲೆಯ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶತಮಾನೋತ್ಸವದ ಅಂಗವಾಗಿ ಕೆಸರುಗದ್ದೆ ಕ್ರೀಡಾಕೂಟ, ಮ್ಯಾರಥಾನ್, ಬಸವಾನಿ ಹಬ್ಬ, ಗುರು ವಂದನೆ, ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಸಾಂಸ್ಕೃತಿಕ ವೈಭವ ಹಾಗೂ ಸಮಾರೋಪ ಸಮಾರಂಭ ಸೇರಿದಂತೆ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಜನವರಿ 29ರಂದು ಕುಂಬಾರಕೊಡಿಗೆಯ ಕೆಸರುಗದ್ದೆಯಲ್ಲಿ ನಡೆಯುವ ಕೆಸರುಗದ್ದೆ ಕ್ರೀಡೋತ್ಸವದ ಮೂಲಕ ಶತಮಾನೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಹಿರಿಯ ಕ್ರೀಡಾಪಟು ಎ.ಎಸ್. ಉಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಗ್ರಾಮ ಪಂಚಾಯಿತಿ ಸದಸ್ಯೆ ಚೈತ್ರಾ ಉದ್ಘಾಟನೆ ನೆರವೇರಿಸಲಿದ್ದಾರೆ.
ಜನವರಿ 30ರಂದು ಬೆಳಿಗ್ಗೆ ಕೊಳಾವರ ಸರ್ಕಲ್‌ನಿಂದ ಬಸವಾನಿ ಶಾಲೆಯವರೆಗೆ ಮ್ಯಾರಥಾನ್ ಹಾಗೂ ಮಕ್ಕಳ ಮ್ಯಾರಥಾನ್ ನಡೆಯಲಿದ್ದು, ಬಳಿಕ ಶಾಲಾ ಆವರಣದಲ್ಲಿ ಬಸವಾನಿ ಹಬ್ಬದ ಉದ್ಘಾಟನಾ ಸಮಾರಂಭ ಜರುಗಲಿದೆ. ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೇತನಾ ಶ್ರೀನಾಥ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಪ್ರವೀಣ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಸಂಜೆ ಸೋಮೇಶ್ವರ ಕ್ರೀಡಾಂಗಣದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವ ನಡೆಯಲಿದೆ.
ಜನವರಿ 31ರಂದು ಗುರು-ಶಿಷ್ಯ ಸಮಾಗಮ ಮತ್ತು ಗುರು ವಂದನೆ ಕಾರ್ಯಕ್ರಮದೊಂದಿಗೆ ಬಸವಾನಿಯ ನಿವೃತ್ತ ಯೋಧರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ ಹಿರಿಯ ವಿದ್ಯಾರ್ಥಿಗಳ ಬಾಲ್ಯದ ಮೆಲುಕುಗಳ ಕಾರ್ಯಕ್ರಮ ಹಾಗೂ ಸಂಜೆ ಶಾಲಾ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಫೆಬ್ರವರಿ 1ರಂದು ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾಭಿವೃದ್ಧಿ ಟ್ರಸ್ಟ್ ರಚನೆ, ಶಾಲೆಗೆ ಮಕ್ಕಳನ್ನು ಕಳುಹಿಸುವ ಮಾತೆಯರಿಗೆ ಸನ್ಮಾನ ನಡೆಯಲಿದೆ. ಅಪರಾಹ್ನ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಲಿದ್ದು, ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗ, ಶತಮಾನೋತ್ಸವ ಸಮಿತಿ ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶತಮಾನೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

