ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ದಿನ; ಸ್ವಂತ ನಿವೇಶನ ಮಂಜೂರು

Upayuktha
0

ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅರ್ಧ ಎಕರೆ ಜಮೀನು ಮಂಜೂರು





ಮಂಗಳೂರು: ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತಿನ 110 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ತಾಲ್ಲೂಕು ಘಟಕವೊಂದಕ್ಕೆ ಸರ್ಕಾರದಿಂದ ಸ್ವಂತ ಜಮೀನು ಮಂಜೂರಾಗಿರುವ ಅಪರೂಪದ ಸಾಧನೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಕನ್ನಡ ಭವನ ನಿರ್ಮಾಣಕ್ಕಾಗಿ ಅರ್ಧ ಎಕರೆ (50 ಸೆಂಟ್ಸ್) ಜಾಗವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದ್ದು, ಸಂಬಂಧಿತ ಅಧಿಕೃತ ಆದೇಶ ಜಾರಿಯಾಗಿದೆ.


ಮಂಗಳೂರಿನ ಗುರುಪುರ ಹೋಬಳಿಯ ವಾಮಂಜೂರು ಸಮೀಪದ ತಿರುವೈಲು ಗ್ರಾಮದ ಸರ್ವೇ ನಂ. 61/3ರಲ್ಲಿ ಇರುವ ಈ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ರಾಜೇಶ್ ಅವರ ಶಿಫಾರಸ್ಸಿನ ಮೇರೆಗೆ ಸರ್ಕಾರ ಮಂಜೂರು ಮಾಡಿದೆ. ಮಂಜೂರಾದ ಜಾಗದಲ್ಲಿ ಶೀಘ್ರದಲ್ಲೇ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ‘ಕನ್ನಡ ಭವನ’ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ ಎಂದು

ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣಕರ್ ತಿಳಿಸಿದರು.


ನಗರದ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಹತ್ವದ ಸಾಧನೆಗೆ ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಘಟಕದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಸಮನ್ವಯದ ಪ್ರಯತ್ನ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದರು.


ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದ ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣಕರ್ ಅವರ ದೂರದೃಷ್ಟಿ ಮತ್ತು ಮುಂದಾಳತ್ವದಿಂದ ಈ ಜಾಗ ಮಂಜೂರಾಗಿದೆ.


ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ RUPSA (ಖಾಸಗಿ ಶಾಲೆಗಳ ಸಂಘ) ಹಾಗೂ KUPMA (ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಸಂಘ) ಸಂಸ್ಥೆಗಳ ಉಪಾಧ್ಯಕ್ಷರಾಗಿಯೂ, ಮುಡಿಪು ಸೂರಜ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವ ಡಾ. ರೇವಣಕರ್ ಅವರು, ತಾಲ್ಲೂಕು ಮಟ್ಟದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಗ್ರ ಬೆಳವಣಿಗೆಗೆ ಸ್ವಂತ ಭವನ ಅಗತ್ಯವೆಂದು ಮನಗಂಡು ಸತತ ಹೋರಾಟ ನಡೆಸಿದ್ದರು.


ನಿರ್ಮಾಣಗೊಳ್ಳಲಿರುವ ಕನ್ನಡ ಭವನವು ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಕನ್ನಡ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಬೌದ್ಧಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಈ ಐತಿಹಾಸಿಕ ಕೊಡುಗೆಗಾಗಿ ಇಡೀ ಕನ್ನಡಿಗರ ಪರವಾಗಿ ಕರ್ನಾಟಕ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.


ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಂಜುನಾಥ ಎಸ್. ರೇವಣಕರ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಉಜಿರೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಗೌರವ ಕಾರ್ಯದರ್ಶಿಗಳಾದ ಡಾ. ಮುರಳಿ ಮೋಹನ್ ಚೂಂತಾರು ಹಾಗೂ ಗಣೇಶ್ ಪ್ರಸಾದ್ ಜಿ., ಕಾರ್ಯದರ್ಶಿ ಸುಬ್ರಾಯ ಭಟ್ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿ ಮೀನಾಕ್ಷಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top