ಸುರತ್ಕಲ್: ರಸ್ತೆ ಸುರಕ್ಷತೆಯ ಕುರಿತು ಎಳೆಯ ಪ್ರಾಯದಲ್ಲಿಯೇ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ಪರಸ್ಪರ ಸುರಕ್ಷತಾ ಪ್ರಜ್ಞೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮನೋಭಾವದಿಂದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಿದೆ ಎಂದು ಶೆಲ್ ಎಂ.ಆರ್.ಪಿ.ಎಲ್. ಸಂಸ್ಥೆಯ ಮ್ಯಾನೇಜರ್ ಶ್ರೀನಿವಾಸ ಕುಳಾಯಿ ಹೇಳಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಸ್‌ನಲ್ಲಿ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಮುರುಗನ್ ಆಯಿಲ್ ಕಾರ್ಪೋರೇಶನ್ ಹಾಗೂ ಶೆಲ್ ಎಂ.ಆರ್.ಪಿ.ಎಲ್. ಏವಿಯೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ಆಯೋಜಿಸಲಾದ ರಸ್ತೆ ಸುರಕ್ಷತಾ ಸ್ಪರ್ಧೆ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುರುಗನ್ ಆಯಿಲ್ ಕಾರ್ಪೋರೇಶನ್‌ನ ಮ್ಯಾನೇಜರ್ ಮುರಳಿಧರನ್ ಮಾತನಾಡಿ, ಸುರಕ್ಷಿತ ಜೀವನಕ್ಕಾಗಿ ನಿಯಮಗಳ ಪಾಲನೆ ಅತ್ಯಾವಶ್ಯಕವಾಗಿದೆ. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅವುಗಳ ಮಹತ್ವವನ್ನು ಹಿರಿಯರಿಗೆ ಸಹ ತಿಳಿಸಬೇಕು ಎಂದು ಹೇಳಿದರು.
ಶೆಲ್ ಎಂ.ಆರ್.ಪಿ.ಎಲ್. ಸಂಸ್ಥೆಯ ಪವನ್ ಮೈರ್ಪಡಿ ರಸ್ತೆ ಸುರಕ್ಷತಾ ಕ್ರಮಗಳು ಹಾಗೂ ಅನುಸರಿಸಬೇಕಾದ ವಿಧಾನಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ, ಪಠ್ಯ ಶಿಕ್ಷಣದೊಂದಿಗೆ ಜೀವನ ಪಾಠವೂ ವಿದ್ಯಾರ್ಥಿಗಳಿಗೆ ಅಗತ್ಯವಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ತಿಳಿದುಕೊಂಡು ಅವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಂಜುಳಾ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಭರತ್ ಕುಮಾರ್ ಕೂಳೂರು, ಶೆಲ್ ಎಂ.ಆರ್.ಪಿ.ಎಲ್.ನ ಜೋಶುವ ಪಿರೇರಾ, ಅರುಣ್ ನಾಯರ್, ಭರತೇಶ್, ಮುರುಗನ್ ಆಯಿಲ್ ಕಾರ್ಪೋರೇಶನ್‌ನ ರತ್ನವೇಲು, ರಾಮಚಂದ್ರನ್, ಶಾಲಾ ಶಿಕ್ಷಕಿಯರಾದ ಸಿಂತೀಯಾ, ನೀತಾ ತಂತ್ರಿ, ರೂಪ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯೆ ಶಶಿಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿ, ಹಿರಿಯ ಶಿಕ್ಷಕಿ ಸುಕೇಶಿನಿ ವಂದಿಸಿದರು. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


