ಉಡುಪಿ: ಕರ್ನಾಟಕ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಿದಲ್ಲಿ, ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣವನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.
ಈ ಕುರಿತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬರೆದಿರುವ ಪತ್ರದಲ್ಲಿ ಸಚಿವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮನವಿಯ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಎರ್ಮಾಳಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಸಂಬಂಧಿಸಿ ಕೇಂದ್ರ ವಿಮಾನಯಾನ ಸಚಿವರಿಗೆ ಅಧಿಕೃತ ಮನವಿ ಸಲ್ಲಿಸಿದ್ದರು.
ಸಚಿವರು ತಮ್ಮ ಪತ್ರದಲ್ಲಿ, ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅಡಿಯಲ್ಲಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ಸುಧಾರಣೆಗೆ ಅಗತ್ಯ ಸಹಕಾರ ನೀಡಲು ಸಮ್ಮತಿ ಇರುವುದಾಗಿ ತಿಳಿಸಿದ್ದಾರೆ. ಆದರೆ ಯೋಜನೆ ಜಾರಿಗೆ ಬರಬೇಕಾದರೆ ರಾಜ್ಯ ಸರ್ಕಾರದಿಂದ ಸೂಕ್ತ ಸ್ಥಳ ಗುರುತಿಸುವುದು, ಕಾರ್ಯಸಾಧ್ಯತಾ ಅಧ್ಯಯನ (Feasibility Study) ನಡೆಸುವುದು ಹಾಗೂ ಪೂರ್ಣ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದು ಅನಿವಾರ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಭಾರತ ಸರ್ಕಾರದ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿಯಂತೆ, ನಿಗದಿತ ಮಾರ್ಗಸೂಚಿಗಳು ಹಾಗೂ ತಾಂತ್ರಿಕ ಮಾನದಂಡಗಳನ್ನು ಪೂರೈಸಿದಲ್ಲಿ ಕೇಂದ್ರ ಸರ್ಕಾರದಿಂದ ಆರ್ಥಿಕ ಹಾಗೂ ತಾಂತ್ರಿಕ ನೆರವು ಲಭ್ಯವಾಗಲಿದೆ ಎಂಬುದನ್ನೂ ಸಚಿವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬೆಳವಣಿಗೆಯಿಂದ ಉಡುಪಿ ಜಿಲ್ಲೆಯ ಎರ್ಮಾಳಿನಲ್ಲಿ ಪ್ರಸ್ತಾಪಿತ ವಿಮಾನ ನಿಲ್ದಾಣ ಯೋಜನೆಯ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆ ಜೋರಾಗಿದ್ದು, ಜಿಲ್ಲೆಯ ಆರ್ಥಿಕ, ಪ್ರವಾಸೋದ್ಯಮ ಹಾಗೂ ಸಂಪರ್ಕ ವ್ಯವಸ್ಥೆಗೆ ಮಹತ್ವದ ಉತ್ತೇಜನ ದೊರೆಯಲಿದೆ ಎಂಬ ನಿರೀಕ್ಷೆ ಮೂಡಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

