- ಹವ್ಯಕ ಮಹಾಸಭೆಯ ಮನವಿಗೆ ಸರ್ಕಾರದ ಮನ್ನಣೆ
- ವಿಶಿಷ್ಟ ಭಾಷೆಯ ಸಂವರ್ಧನಾ ಉಪಕ್ರಮಕ್ಕೆ ಹವ್ಯಕ ಮಹಾಸಭೆಯ ಅಭಿನಂದನೆ.
ಬೆಂಗಳೂರು: ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯದಂತೆ ಹಳೆಗನ್ನಡಕ್ಕೆ ಸಮೀಪವಾದ, ವಿಶಿಷ್ಟ ಲಕ್ಷಣಗಳನ್ನು ಒಳಗೊಂಡ, ಭಾಷಾ ಶ್ರೀಮಂತಿಕೆಯಿಂದ ಕೂಡಿದ ಹವ್ಯಕ ಭಾಷೆಯ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ "ಹವ್ಯಕ ಭಾಷಾ ಅಕಾಡೆಮಿ" ಯನ್ನು ಸ್ಥಾಪಿಸುವಂತೆ ಶ್ರೀ ಅಖಿಲ ಹವ್ಯಕ ಮಹಾಸಭೆಯು ಮಾಡಿದ ಮನವಿಯನ್ನು ಪರಿಗಣಿಸಿ ರಾಜ್ಯ ಸರ್ಕಾರವು "ಹವ್ಯಕ ಭಾಷಾ ಅಕಾಡೆಮಿ"ಯನ್ನು ಈ ವರ್ಷದ ಆಯವ್ಯಯ ಪತ್ರದಲ್ಲಿ ಘೋಷಿಸಿದೆ.
ಹವಿಗನ್ನಡದ ಸಂರಕ್ಷಣೆ ಹಾಗೂ ಸಂವರ್ಧನೆಗಾಗಿ ಭಾಷಾ ಅಕಾಡೆಮಿಯನ್ನು ಘೋಷಿಸಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಹಾಗೂ ಕರ್ನಾಟಕ ಸರ್ಕಾರಕ್ಕೆ ಹವ್ಯಕ ಮಹಾಸಭೆಯು ಧನ್ಯವಾದಗಳನ್ನು ಸಮರ್ಪಿಸುತ್ತದೆ.
ಹವಿಗನ್ನಡ, ಹವ್ಯಕ ಕನ್ನಡ, ಹೈವಗನ್ನಡ, ಹೈಗಭಾಷೆ ಎಂಬ ಹೆಸರುಗಳಿಂದ ಗುರುತಿಸಲ್ಪಡುವ ಹವ್ಯಕ ಭಾಷೆಯು ಕನ್ನಡದ ಸಾಮಾಜಿಕ ಉಪಭಾಷೆಯಾಗಿದ್ದು, ಭಾಷಾ ವೈವಿಧ್ಯ ಹಾಗೂ ಭಾಷಾ ಶ್ರೀಮಂತಿಕೆ ಕಾರಣದಿಂದಾಗಿ ಭಾಷಾ ಜಗತ್ತಿನಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಪ್ರಾಂತ್ಯವಾರು ಭಾಷಾ ವೈವಿಧ್ಯ ಹವಿಗನ್ನಡದ ಶ್ರೀಮಂತಿಕೆಯ ಪ್ರತೀಕವಾಗಿದ್ದು, ಉತ್ತರಕನ್ನಡ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಕಾಸರಗೋಡು ಮುಂತಾದ ಪ್ರದೇಶಗಳಲ್ಲಿ ವಾಸವಾಗಿರುವ 6 ಲಕ್ಷಕ್ಕೂ ಅಧಿಕ ಹವ್ಯಕರ ಮನೆ ಮಾತಾಗಿದೆ.
ಕನ್ನಡ ಭಾಷೆಯ ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಹವಿಗನ್ನಡದ ಅಧ್ಯಯನ ಬಹಳ ಮುಖ್ಯವಾಗಿದ್ದು, ಇದುವರೆಗೆ ಲಭ್ಯವಿರುವ ಅತ್ಯಂತ ಹಳೆಯ ಕನ್ನಡ ಸಾಹಿತ್ಯ ಮತ್ತು ಶಾಸನಗಳಲ್ಲಿಯೂ ಕಂಡುಬರುವ ಕೆಲವು ಆದಿ-ದ್ರಾವಿಡ (Proto- Dravidian) ಲಕ್ಷಣಗಳನ್ನು ಹವಿಗನ್ನಡವು ಇಂದಿಗೂ ಉಳಿಸಿಕೊಂಡಿದೆ. ಆದ್ದರಿಂದ ಹವಿಗನ್ನಡದ ಅಮೂಲಾಗ್ರ ಅಧ್ಯಯನ ಹಾಗ ಸಂರಕ್ಷಣೆಗಾಗಿ ಹವ್ಯಕ ಭಾಷಾ ಅಕಾಡೆಮಿಯ ಸ್ಥಾಪನೆ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಂಡಿರುವ ರಾಜ್ಯ ಸರ್ಕಾರಕ್ಕೆ ಹಾಗೂ ಈ ಪ್ರಯತ್ನಕ್ಕೆ ಕೈಜೋಡಿಸಿದ ಎಲ್ಲಾ ಹಿತೈಷಿಗಳಿಗೂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಶ್ರೀ ಅಖಿಲ ಹವ್ಯಕ ಮಹಾಸಭೆ ಹಾಗೂ ಸಮಸ್ತ ಹವ್ಯಕ ಸಮಾಜದ ಪರವಾಗಿ ಧನ್ಯವಾದಗಳನ್ನು ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

