ಕಾಂಗ್ರೆಸ್ ನಾಯಕರ ಸ್ಥಳ ವೀಕ್ಷಣೆ ‘ಮಳೆ ನಿಂತ ಬಳಿಕ ಕೊಡೆ ಏರಿಸಿದಂತಿದೆ’: ಶಾಸಕ ವೇದವ್ಯಾಸ ಕಾಮತ್

Upayuktha
0


ಮಂಗಳೂರು, ಮಾ.7: ಕಳೆದ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿದ ಹಾನಿಗೆ ಸಂಬಂಧಿಸಿದಂತೆ ಈಗ ಕಾಂಗ್ರೆಸ್ ನಾಯಕರು ಸ್ಥಳ ವೀಕ್ಷಣೆ ನಡೆಸಿ ಅನುದಾನ ತಂದಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು “ಮಳೆ ನಿಂತ ಬಳಿಕ ಕೊಡೆ ಏರಿಸಿದಂತಾಗಿದೆ” ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪಿಸಿದರು.


ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮಳೆಗಾಲದಲ್ಲಿ ಕ್ಷೇತ್ರದ ಹಲವೆಡೆ ಉಂಟಾದ ಅಪಾರ ಹಾನಿಯ ಕುರಿತು ಸಮಗ್ರ ವರದಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ರಾಜ್ಯ ವಿಪತ್ತು ಉಪಶಮನ ನಿಧಿ (SDRF) ಅಡಿಯಲ್ಲಿ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಲಾಗಿತ್ತು ಎಂದು ಹೇಳಿದರು.


ಈ ಕುರಿತು 2025–26ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನದ ಕಾಮಗಾರಿಗಳನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಫೆಬ್ರವರಿ 16, 2026ರಂದು ಹೊರಡಿಸಿದ ಅಧಿಕೃತ ಜ್ಞಾಪನ ಪತ್ರದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 28 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶ ನೀಡಿರುವುದಾಗಿ ಅವರು ತಿಳಿಸಿದರು.


ಈ ಎಲ್ಲ ಪ್ರಕ್ರಿಯೆಗಳು ನಡೆದ ಬಳಿಕ ಈಗ ಕೆಲವು ಕಾಂಗ್ರೆಸ್ ನಾಯಕರು ಕ್ಷೇತ್ರಕ್ಕೆ ಭೇಟಿ ನೀಡಿ, ಮಳೆ ಹಾನಿಗೆ ಸಂಬಂಧಿಸಿದಂತೆ ಸರ್ಕಾರದಿಂದ 10 ಕೋಟಿ ರೂ. ಅನುದಾನ ತಂದಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು ಜನರ ಮುಂದೆ ನಗೆಪಾಟಲಿಗೆ ಗುರಿಯಾಗುವಂತಿದೆ ಎಂದು ಕಾಮತ್ ಟೀಕಿಸಿದರು. ಮಂಗಳೂರು ದಕ್ಷಿಣ ಶಾಸಕರ ಹೆಸರಿನಲ್ಲಿಯೇ ಜಿಲ್ಲಾಧಿಕಾರಿಗಳ ಅಧಿಕೃತ ಆದೇಶ ಹೊರಬಂದಿರುವುದು ಸ್ಪಷ್ಟವಾಗಿದ್ದರೂ, ಕಾಂಗ್ರೆಸ್ ನಾಯಕರು ಫೋಟೋ ಕ್ಲಿಕ್ಕಿಸಿಕೊಂಡು ಪ್ರಚಾರ ಪಡೆಯಲು ಯತ್ನಿಸುತ್ತಿರುವುದು ಹತಾಶೆಯ ಸಂಕೇತ ಎಂದು ಹೇಳಿದರು.


ಮಳೆ ಹಾನಿ ಸಂಭವಿಸಿದಾಗ ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಪರಿಹಾರ ಒದಗಿಸುವುದು ನಿಯಮ. ಯಾವ ಕಾಮಗಾರಿ ಎಲ್ಲಿ ನಡೆಯಬೇಕು ಎಂಬುದನ್ನು ಸ್ಥಳೀಯ ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ನಿರ್ಧರಿಸುತ್ತಾರೆ. ಹೀಗಿರುವಾಗ ಎಲ್ಲವೂ ತಮ್ಮಿಂದಲೇ ನಡೆದಿದೆ ಎಂದು ಹೇಳಿಕೊಳ್ಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.


ಆಶಾ ಕಾರ್ಯಕರ್ತೆಯರಿಗೆ ಅನ್ಯಾಯ

ರಾಜ್ಯ ಕಾಂಗ್ರೆಸ್ ಸರ್ಕಾರ ಆಶಾ ಕಾರ್ಯಕರ್ತೆಯರ ಮೇಲೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ಕಾಮತ್, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 163 ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆದುಹಾಕಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.


ಕೊರೋನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯೊಂದಿಗೆ ಮುಂಚೂಣಿಯಲ್ಲಿ ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಜನಸೇವೆಯಲ್ಲಿ ತೊಡಗಿದ್ದಾರೆ. 15–20 ವರ್ಷಗಳಿಂದ ಸೇವೆ ಸಲ್ಲಿಸಿದವರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದರೆ ಅವರ ಜೀವನೋಪಾಯದ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದರು.


ವೈದ್ಯಾಧಿಕಾರಿಗಳ ಮುಷ್ಕರದ ಬಗ್ಗೆ ಆತಂಕ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆಯ ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಮತ್ ಹೇಳಿದರು.


ರಾಜ್ಯದಲ್ಲಿ ಲಕ್ಷಾಂತರ ಜನರಿಗೆ ಆರೋಗ್ಯ ಸೇವೆ ಒದಗಿಸುವ ವೈದ್ಯರು ಈಗಾಗಲೇ ಹೆಚ್ಚಿನ ಕಾರ್ಯಭಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವರೇ ಆರೋಗ್ಯ ಸಚಿವರಾಗಿದ್ದರೂ ಜಿಲ್ಲೆಯಲ್ಲಿ ಪದೇಪದೇ ಆರೋಗ್ಯ ವ್ಯವಸ್ಥೆ ಹದಗೆಡುತ್ತಿರುವುದು ಶೋಚನೀಯ ಎಂದು ಹೇಳಿದರು.


ಗುತ್ತಿಗೆದಾರರ ಪ್ರತಿಭಟನೆ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಗುತ್ತಿಗೆದಾರರಿಗೆ ಸುಮಾರು 37 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿದಿರುವುದನ್ನು ವಿರೋಧಿಸಿ ಗುತ್ತಿಗೆದಾರರ ಸಂಘ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಇಳಿದಿದೆ. ಆದರೆ ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದು ಖಂಡನೀಯ ಎಂದು ಕಾಮತ್ ಆರೋಪಿಸಿದರು.


ಶಾಸಕರ ಕಚೇರಿ ಅಟಲ್ ಸೇವಾ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾನಗರಪಾಲಿಕೆಯ ಮಾಜಿ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ನಿಕಟಪೂರ್ವ ಉಪ ಮೇಯರ್ ಪೂರ್ಣಿಮಾ, ಮಂಗಳೂರು ನಗರ ದಕ್ಷಿಣದ ಪ್ರಧಾನ ಕಾರ್ಯದರ್ಶಿ ಲಲ್ಲೇಶ್ ಕುಮಾರ್, ನಗರ ದಕ್ಷಿಣ ಬಿಜೆಪಿ ಉಪಾಧ್ಯಕ್ಷೆ ಮಂಗಳಾ ಆಚಾರ್, ಕಾರ್ಯದರ್ಶಿ ಸುನೀತಾ ರಾವ್, ಸುರೇಖಾ ಎಂ.ಎಸ್ ಅವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top