ಸಂಶೋಧನಾ ಮನೋಭಾವದಿಂದ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ: ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ

Upayuktha
0


ಪುತ್ತೂರು: ವಿಜ್ಞಾನ ವಿದ್ಯಾರ್ಥಿಗಳು ಕೇವಲ ಪದವೀಧರರಾಗದೆ, ಜ್ಞಾನಾರ್ಜನೆಯ ತೀವ್ರ ಆಸಕ್ತಿಯೊಂದಿಗೆ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಏಕಾಗ್ರತೆ, ಶಿಸ್ತು ಹಾಗೂ ವಿಶ್ಲೇಷಣಾತ್ಮಕ ಚಿಂತನೆಯ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ಸಮಾಜಮುಖಿ ವಿಜ್ಞಾನಿಗಳಾಗಿ ರೂಪುಗೊಳ್ಳಬೇಕು ಎಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು.


ಅವರು ಕಾಲೇಜಿನ ವಿಜ್ಞಾನ ವೇದಿಕೆಯ ಆಶ್ರಯದಲ್ಲಿ ಸರ್ ಸಿ.ವಿ. ರಾಮನ್ ಅವರ ‘ರಾಮನ್ ಪರಿಣಾಮ’ ಆವಿಷ್ಕಾರದ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ - 2026’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಜಿರೆಯ ಎಸ್‌ಡಿಎಂ ತಾಂತ್ರಿಕ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಪಿ. ಎ. ಅವರು, ‘ಸಂಶೋಧನಾ ಉಪಪತ್ತಿ ಹಾಗೂ ವಿಧಾನಶಾಸ್ತ್ರ’ದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಂಶೋಧನೆಯಲ್ಲಿ ಕ್ರಮಬದ್ಧತೆ ಹಾಗೂ ತತ್ವಾಧಾರಿತ ವಿಧಾನಗಳನ್ನು ಅನುಸರಿಸುವುದರಿಂದ ಮಾತ್ರ ನಿಖರ ಫಲಿತಾಂಶ ಸಾಧ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.


ವಿಜ್ಞಾನ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾರಪೂರ್ತಿ ಸ್ಪರ್ಧೆಗಳ ಸರಣಿ ‘ಸೈಫ್ಯೂಷನ್’ ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆಯಾಯಿತು. ಸಮಾರೋಪದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಡೀನ್ ಡಾ. ಮಾಲಿನಿ ಕೆ., ಸೈನ್ಸ್ ಫೋರಮ್ ಸಂಯೋಜಕರಾದ ಡಾ. ಎಡ್ವಿನ್ ಎಸ್.ಡಿ’ಸೋಜಾ ಮತ್ತು ಶ್ರೀಮತಿ ಶ್ರೀರಕ್ಷಾ ಬಿ. ವಿ. ಉಪಸ್ಥಿತರಿದ್ದರು. ವಿದ್ಯಾರ್ಥಿ ಯಜ್ಞೇಶ್ ಸ್ವಾಗತಿಸಿ, ರಜತ್ ವಂದಿಸಿದರು.


ಗಾಯತ್ರಿ ಕಾರ್ಯಕ್ರಮ ನಿರೂಪಿಸಿ, ಮಾನಸ ಮತ್ತು ಅಪರ್ಣ ಪ್ರಾರ್ಥಿಸಿದರು. ಕಾಲೇಜಿನ ವಿಜ್ಞಾನ ವಿಭಾಗದ ಅಧ್ಯಾಪಕರು ಹಾಗೂ ಸುಮಾರು 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top