ಸಾವಿರಾರು ಭಕ್ತರಿಂದ ಭವ್ಯ ಮೆರವಣಿಗೆ – ಬಸವಣ್ಣನವರ ತತ್ವಗಳ ಸ್ಮರಣೆ
ಅಥಣಿ (ಬೆಳಗಾವಿ): ತಾಲೂಕಿನ ಅಥಣಿ ಪಟ್ಟಣದಲ್ಲಿ ಬಸವಣ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಅಂಗವಾಗಿ ಅಂಬೇಡ್ಕರ್ ಸರ್ಕಲ್‌ನಿಂದ ಆರಂಭವಾದ ಭವ್ಯ ಮೆರವಣಿಗೆ ಮುಖ್ಯಪೇಟೆ ಮೂಲಕ ಸಾಗಿದ್ದು, ಸಾವಿರಾರು ಭಕ್ತರು ಭಾಗವಹಿಸಿ ಭಕ್ತಿ ಭಾವ ಪ್ರದರ್ಶಿಸಿದರು.
ಮೆರವಣಿಗೆ ಬಳಿಕ ಬಸವೇಶ್ವರ ಸರ್ಕಲ್‌ನಲ್ಲಿ ಭಕ್ತಾದಿಗಳು ಒಂದಾಗಿ ಸೇರಿ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಬಸವಣ್ಣನವರ ಜೀವನ ಸಂದೇಶಗಳನ್ನು ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಥಣಿಯ ಮಾಜಿ ಶಾಸಕ ಶಹಜಾನ್ ಡೊಂಗರಗಾಂವ ಅವರು, ಬಸವಣ್ಣನವರ ತತ್ವಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ ಎಂದು ಹೇಳಿದರು. “ಕಾಯಕವೇ ಕೈಲಾಸ” ಹಾಗೂ “ದಯವೇ ಧರ್ಮದ ಮೂಲ” ಎಂಬ ವಚನಗಳ ಮೂಲಕ ಅವರು ಸಮಾನತೆ, ಮಾನವೀಯತೆ ಮತ್ತು ಶಾಂತಿಯ ಸಂದೇಶವನ್ನು ಸಾರಿದ್ದಾರೆ ಎಂದು ತಿಳಿಸಿದರು.
ಅನುಭವ ಮಂಟಪದ ಸ್ಥಾಪನೆಯ ಮೂಲಕ ಬಸವಣ್ಣನವರು ಸಮಾನ ಸಮಾಜ ನಿರ್ಮಾಣಕ್ಕೆ ಪೂರಕವಾದ ಚಿಂತನೆಗಳನ್ನು ನೀಡಿದ್ದು, ಮಹಿಳಾ ಸಬಲೀಕರಣ ಹಾಗೂ ಸಮಾನ ಹಕ್ಕುಗಳ ಪರವಾಗಿ ಹೋರಾಡಿದ್ದಾರೆ ಎಂದು ಅವರು ಹೇಳಿದರು. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂಗ್ಲೆಂಡ್‌ನಲ್ಲಿ ಬಸವಣ್ಣನವರ ಪ್ರತಿಮೆಯನ್ನು ಅನಾವರಣಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದು ಉಲ್ಲೇಖಿಸಿದರು.
“ಬಸವಣ್ಣನವರ ಮಹತ್ವವನ್ನು ವಿವರಿಸಲು ಒಂದು ವರ್ಷವೂ ಸಾಕಾಗುವುದಿಲ್ಲ,” ಎಂದು ಹೇಳಿದ ಅವರು, ತಾನೂ ಅವರ ತತ್ವ-ಸಿದ್ಧಾಂತಗಳನ್ನು ಅನುಸರಿಸುತ್ತಿದ್ದೇನೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.
ವರದಿ: ಮಹೇಶ್ ಶರ್ಮಾ
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


