ಯುವಶಕ್ತಿಯ ಸದ್ಬಳಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಕೋಡಿ ಶ್ರೀ

Upayuktha
0


ಕೆ.ಆರ್.ಪೇಟೆ, ಏಪ್ರಿಲ್ 19: ಯುವಕರಲ್ಲಿರುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.


ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಚೌಡಸಮುದ್ರ ಗ್ರಾಮದಲ್ಲಿ ಕೆ.ಆರ್.ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ 2025–26ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.


ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ಅಳವಡಿಸಿಕೊಂಡರೆ ಬದುಕು ಪರಿಪೂರ್ಣವಾಗುತ್ತದೆ. ಯಶಸ್ಸು ಪರಿಶ್ರಮದ ಮೇಲೆ ಅವಲಂಬಿತವಾಗಿದ್ದು, ನಿರಂತರ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ ಎಂದು ಹೇಳಿದರು. ಇಂದಿನ ಯುವಕರು ತಮ್ಮೊಳಗಿನ ಸಾಮರ್ಥ್ಯವನ್ನು ಅರಿತುಕೊಳ್ಳಬೇಕಿದ್ದು, ಅದಕ್ಕಾಗಿ ಉಪನ್ಯಾಸಕರು, ಪಾಲಕರು ಹಾಗೂ ಗುರು ಹಿರಿಯರ ಮಾರ್ಗದರ್ಶನ ಅಗತ್ಯವೆಂದು ತಿಳಿಸಿದರು.


ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಶಿಸ್ತಿನ ಜೀವನ ನಡೆಸಬೇಕು. ಶ್ರಮದಾನದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅದು ರಾಷ್ಟ್ರಸೇವೆಗೆ ಸಮಾನವಾಗುತ್ತದೆ. ಪಾಲಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಅವರ ಭವಿಷ್ಯವನ್ನು ಗಟ್ಟಿಗೊಳಿಸಬೇಕು ಎಂದು ಸಲಹೆ ನೀಡಿದರು.


ಮಹಾತ್ಮ ಗಾಂಧೀಜಿ ಅವರ ಕನಸಿನಂತೆ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಮತ್ತು ವ್ಯಕ್ತಿತ್ವ ವಿಕಸನ ಬೆಳೆಸುವಲ್ಲಿ ಎನ್‌ಎಸ್‌ಎಸ್ ಶಿಬಿರಗಳ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು. ಇಂದಿನ ಯುವಪೀಳಿಗೆ ತಂದೆ-ತಾಯಿಗಳ ಮೌಲ್ಯವನ್ನು ಅರಿತು, ಅವರ ಭಾವನೆಗಳಿಗೆ ಗೌರವ ನೀಡಬೇಕು ಎಂದು ಅವರು ಒತ್ತಿಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜಸೇವಕ ಹಾಗೂ ಆರ್‌ಟಿಒ ಮಲ್ಲಿಕಾರ್ಜುನ್ ಮಾತನಾಡಿ, ಉತ್ತಮ ಶಿಕ್ಷಣದ ಜೊತೆಗೆ ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಮಾನತೆ ಮನೋಭಾವ ಬೆಳೆದು, ಗ್ರಾಮೀಣ ಸಮಸ್ಯೆಗಳ ಅರಿವು ಮೂಡುತ್ತದೆ. ಚೌಡಸಮುದ್ರದಲ್ಲಿ ನಡೆಯುತ್ತಿರುವ ಈ ಶಿಬಿರವು ಶಿಕ್ಷಣದ ಜೊತೆಗೆ ಧಾರ್ಮಿಕ ಅರಿವು ವೃದ್ಧಿಸುವ ದಿಕ್ಕಿನಲ್ಲಿ ವಿಶೇಷವಾಗಿದೆ ಎಂದು ಅಭಿಪ್ರಾಯಪಟ್ಟರು.


ತಂಡೆಕೆರೆ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಗಳು ಮಾತನಾಡಿ, ಕನಸುಗಳೊಂದಿಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಪರಿಶ್ರಮದಿಂದ ಸಾಧನೆಗೈದು ಸಾರ್ಥಕ ಜೀವನ ನಡೆಸಬೇಕು ಎಂದು ಪ್ರೇರಣಾದಾಯಕ ಉಪನ್ಯಾಸ ನೀಡಿದರು.


ಕಾರ್ಯಕ್ರಮದ ಅಂಗವಾಗಿ ಆಗಮಿಸಿದ ಗಣ್ಯರನ್ನು ಗ್ರಾಮಸ್ಥರು ಪೂರ್ಣಕುಂಭ, ಮಂಗಳವಾದ್ಯ ಹಾಗೂ ರಥೋತ್ಸವದ ಶೈಲಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದವು.


ಈ ಸಂದರ್ಭದಲ್ಲಿ ತಾ.ಪಂ ಮಾಜಿ ಸದಸ್ಯ ಸಾಸಲು ಈರಪ್ಪ, ಕಾಂಗ್ರೆಸ್ ಯುವ ಮುಖಂಡ ದೇವರಳ್ಳಿ ಮಹೇಂದ್ರ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಲಕ್ಷ್ಮಿಪುರ ಚಂದ್ರೆಗೌಡ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್, ನಾಗೇಶ್ ಬಾಬು, ಪ್ರಕಾಶ್, ನಿವೃತ್ತ ಶಿಕ್ಷಕ ಶಿವಪ್ಪ ಸೇರಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


- ಮನು ಮಾಕವಳ್ಳಿ, ಕೆ.ಆರ್ ಪೇಟೆ


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top