ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಹಾಗೂ ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಪ್ರಾದೇಶಿಕ ಕಚೇರಿ ಸ್ಥಾಪಿಸುವಂತೆ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
2026-27ನೇ ಸಾಲಿನ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 56,432 ಹುದ್ದೆಗಳನ್ನು ಭರ್ತಿಗೊಳಿಸುವುದಾಗಿ ಸರ್ಕಾರ ಘೋಷಿಸಿದ್ದರೂ, ಇಂದಿಗೂ ನೇಮಕಾತಿ ಪ್ರಕ್ರಿಯೆ ಆರಂಭವಾಗದಿರುವುದು ಆತಂಕಕಾರಿ ಎಂದು ಮನವಿಯಲ್ಲಿ ಅವರು ತಿಳಿಸಿದ್ದಾರೆ.
ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪ್ರಾರಂಭಿಸಿ, ಪಾರದರ್ಶಕವಾಗಿ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಅತ್ಯಂತ ಅಗತ್ಯ. ಇದರಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ಸರ್ಕಾರದ ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಲಿದೆ ಎಂದು ಅವರು ಒತ್ತಿಹೇಳಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಂತಹ ಕರಾವಳಿ ಭಾಗಗಳಲ್ಲಿ ಪ್ರತಿಭಾವಂತ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ KPSCಯ ಪ್ರಮುಖ ಕಾರ್ಯಗಳು ಬೆಂಗಳೂರಿನಲ್ಲೇ ಕೇಂದ್ರಿತವಾಗಿರುವುದರಿಂದ, ಕರಾವಳಿ ಭಾಗದ ಅಭ್ಯರ್ಥಿಗಳಿಗೆ ಪ್ರಯಾಣ ಹಾಗೂ ಇತರ ಸೌಲಭ್ಯಗಳಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಅವರು ಗಮನಕ್ಕೆ ತಂದರು.
ಈ ಹಿನ್ನೆಲೆಯಲ್ಲಿ, ಮಂಗಳೂರಿನಲ್ಲಿ KPSC ಪ್ರಾದೇಶಿಕ ಕಚೇರಿ ಸ್ಥಾಪನೆ ಮಾಡಿದರೆ ಕರಾವಳಿ ಭಾಗದ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಎರಡೂ ಕ್ರಮಗಳು ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಯುವಜನರಿಗೆ ಉದ್ಯೋಗಾವಕಾಶಗಳನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರವಹಿಸಲಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೇ ವೇಳೆ, 2025ರ ಡಿಸೆಂಬರ್‌ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ, ರಾಜ್ಯದ 43 ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ಸರ್ಕಾರ ಮಾಹಿತಿ ನೀಡಿದ್ದನ್ನು ಅವರು ಸ್ಮರಿಸಿದರು. ಈ ಹುದ್ದೆಗಳ ಭರ್ತಿಗೂ ತ್ವರಿತ ಕ್ರಮ ಕೈಗೊಳ್ಳುವಂತೆ ಅವರು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


