ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು: ಉಲ್ಲಾಸ್ ಕೆ.
ಪುತ್ತೂರು: ಅತಿಯಾದ ತಾಪಮಾನದ ಪರಿಣಾಮವಾಗಿ ಹಿಮನದಿಗಳು ಕರಗುತ್ತಿದ್ದು, ಸಮುದ್ರಮಟ್ಟ ಏರಿಕೆ ಹಾಗೂ ಹವಾಮಾನದಲ್ಲಿ ವೈಪರೀತ್ಯ ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ವರ್ಷದ ವಿಶ್ವ ಪರಿಸರ ದಿನಾಚರಣೆಯು ತುರ್ತು ಹವಾಮಾನ ಕ್ರಮಗಳು ಹಾಗೂ ಪ್ರಕೃತಿ ಆಧಾರಿತ ಪರಿಹಾರಗಳ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ ಎಂದು ಪುತ್ತೂರು ಉಪವಲಯ ಅರಣ್ಯಾಧಿಕಾರಿ ಉಲ್ಲಾಸ್ ಕೆ. ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಕ್ರವಾರ ಮಾತನಾಡಿದರು.
ಮ್ಯಾಂಗ್ರೋವ್ ಕಾಡುಗಳ ವಿಸ್ತರಣೆಯಿಂದ ಜಲಮಾಲಿನ್ಯ ಮತ್ತು ವಾಯುಮಾಲಿನ್ಯವನ್ನು ಕಡಿಮೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ 2023ರಲ್ಲಿ ಮ್ಯಾಂಗ್ರೋವ್ ಪರಿಸರ ವ್ಯವಸ್ಥೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ವಿಶೇಷ ಒತ್ತು ನೀಡುವ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಸಣ್ಣ ಸಣ್ಣ ಬದಲಾವಣೆಗಳನ್ನು ಅಳವಡಿಸಿಕೊಳ್ಳಬೇಕು. ಅಂಗಡಿಗಳಲ್ಲಿ ಅನಗತ್ಯವಾಗಿ ಕಾಗದದ ರಶೀದಿಗಳನ್ನು ಪಡೆಯುವುದನ್ನು ತಪ್ಪಿಸುವುದರಿಂದ ಕಾಗದದ ಬಳಕೆ ಕಡಿಮೆಯಾಗುತ್ತದೆ. ಖರೀದಿಗೆ ತೆರಳುವಾಗ ಸ್ವಂತ ಬಟ್ಟೆಯ ಚೀಲವನ್ನು ಬಳಸುವುದರಿಂದ ಪ್ಲಾಸ್ಟಿಕ್ ಬಳಕೆಯನ್ನು ತಗ್ಗಿಸಬಹುದು. ಸೈಕಲ್ ಹಾಗೂ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಮತ್ತು ಅನಗತ್ಯ ಇ-ಅಂಚೆಗಳನ್ನು ಅಳಿಸುವ ಮೂಲಕವೂ ಪರಿಸರದ ಮೇಲಿನ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ಮಾತನಾಡಿ ಮನುಷ್ಯನಿಗೆ ಪರಿಸರ ಅನಿವಾರ್ಯ. ಆದರೆ ಪರಿಸರಕ್ಕೆ ಮನುಷ್ಯ ಅನಿವಾರ್ಯನಲ್ಲ. ಆದ್ದರಿಂದ ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಇಂದು ನಾವು ಕಾಡುಗಳನ್ನು ನೇರವಾಗಿ ಕಾಣುತ್ತಿದ್ದೇವೆ. ಪರಿಸರ ರಕ್ಷಣೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ತಲೆಮಾರುಗಳು ಅವುಗಳನ್ನು ಕೇವಲ ಚಿತ್ರಗಳಲ್ಲಿ ಮಾತ್ರ ನೋಡುವ ಪರಿಸ್ಥಿತಿ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ತಲೆತಲಾಂತರಗಳಿಂದ ಬಂದಿರುವ ನೈಸರ್ಗಿಕ ಸಂಪತ್ತನ್ನು ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಜನ್ಮದಿನದಂತಹ ವಿಶೇಷ ಸಂದರ್ಭಗಳಲ್ಲಿ ಕೇಕ್ ಕತ್ತರಿಸುವುದರ ಬದಲು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಕು. ಮಾಲತಿ ಡಿ., ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ವಂಶಿಕ ಬಿ. ರೈ, ಇಂಚರ ಎಸ್. ಮಯ್ಯ ಹಾಗೂ ಅನಘ್ರ್ಯಶ್ರೀ ಪರಿಸರ ಗೀತೆಯನ್ನು ಹಾಡಿದರು. ತ್ರಿಧಾತ್ರಿ ಸ್ವಾಗತಿಸಿದರು. ಬಿ. ತೃಷಾ ವಂದಿಸಿದರು. ಹೃಣ್ಮಯಿ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


