ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

Upayuktha
0

ಸಾರ್ಥಕ ಶಿಕ್ಷಣ ಚಾರಿಟೇಬಲ್ ಟ್ರಸ್ಟ್‌ನಿಂದ 108 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಬೆಂಗಳೂರು: ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಾರ್ಥಕ ಶಿಕ್ಷಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ 2026ನೇ ಸಾಲಿನ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಭಾನುವಾರ ಜಯನಗರ 3ನೇ ಬಡಾವಣೆಯ ಪೈ ವೈಸರಾಯ್ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನೆರವೇರಿತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ ಸರ್ಕಾರದ ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಆಪ್ತ ಸಲಹೆಗಾರರು ಹಾಗೂ ಡಿಆರ್‌ಡಿಒದ ಮಾಜಿ ನಿರ್ದೇಶಕರಾದ ಪದ್ಮವಿಭೂಷಣ ಡಾ. ವಾಸುದೇವ ಕೆ. ಆತ್ರೆ ಅವರು ಮಾತನಾಡಿ, “ಶಿಕ್ಷಣವು ವ್ಯಕ್ತಿಯ ಬದುಕನ್ನು ಮಾತ್ರವಲ್ಲ, ಇಡೀ ಸಮಾಜವನ್ನು ಪರಿವರ್ತಿಸುವ ಶಕ್ತಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ದೊರೆಯುವ ನೆರವು ಅವರ ಭವಿಷ್ಯವನ್ನು ಉಜ್ವಲಗೊಳಿಸುವುದರ ಜೊತೆಗೆ ರಾಷ್ಟ್ರದ ಅಭಿವೃದ್ಧಿಗೂ ಕೊಡುಗೆ ನೀಡುತ್ತದೆ” ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಸಂಸ್ಥೆಯ ಮಾಜಿ ನಿರ್ದೇಶಕರಾದ  ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.


ಗೌರವ ಉಪಸ್ಥಿತರಾಗಿದ್ದ ಶಿಕ್ಷಣ ತಜ್ಞರು ಹಾಗೂ ಇಂಡಸ್ ಟವರ್ಸ್ ಲಿಮಿಟೆಡ್‌ನ ಮಾಜಿ ಸಿಇಒ ಶಾಂತರಾಜು ಬಿ.ಎಸ್. ಅವರು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ವಿಶೇಷ ಆಹ್ವಾನಿತರಾಗಿ ಪೈ ಗ್ರೂಪ್ ಆಫ್ ಹೋಟೆಲ್ಸ್‌ನ ಅಧ್ಯಕ್ಷ ಜಗನ್ನಾಥ ವಿ. ಪೈ ಹಾಗೂ ಉಪಸ್ಥಿತರಿದ್ದು, ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.


ಈ ಸಂದರ್ಭದಲ್ಲಿ ಆಯ್ಕೆಯಾದ 108 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. 


ಸಾರ್ಥಕ ಶಿಕ್ಷಣ ಚಾರಿಟೇಬಲ್ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಕೆ. ಶೇಷಮೂರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಯಾವುದೇ ಪ್ರತಿಭಾವಂತ ವಿದ್ಯಾರ್ಥಿ ಹಣದ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಧ್ಯೇಯ. ಸಮಾಜದ ದಾನಿಗಳು ಮತ್ತು ಹಿತೈಷಿಗಳ ಸಹಕಾರದಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ನೆರವಾಗುವ ಸಂಕಲ್ಪವನ್ನು ಹೊಂದಿದ್ದೇವೆ” ಎಂದು ತಿಳಿಸಿದರು.


2024ರಲ್ಲಿ ಸ್ಥಾಪನೆಯಾದ ಟ್ರಸ್ಟ್, 2025ರಲ್ಲಿ 33 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿದ್ದರೆ, 2026ನೇ ಸಾಲಿನಲ್ಲಿ 108 ವಿದ್ಯಾರ್ಥಿಗಳಿಗೆ ನೆರವು ನೀಡುವ ಮೂಲಕ ತನ್ನ ಸೇವಾ ವ್ಯಾಪ್ತಿಯನ್ನು ಗಮನಾರ್ಹವಾಗಿ ವಿಸ್ತರಿಸಿದೆ. ಪಿಯುಸಿ, ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದೆ. ಪ್ರೊ. ಯಶವಂತ್ ಮತ್ತು ತಂಡದವರ ಮನಮೋಹಕ ವೀಣಾವಾದನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು, ದಾನಿಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


“ಇಂದು ವಿದ್ಯಾರ್ಥಿಗೆ ನೆರವಾದರೆ, ನಾಳೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ” ಎಂಬ ಸಂದೇಶದೊಂದಿಗೆ ಸಾರ್ಥಕ ಶಿಕ್ಷಣ ಚಾರಿಟೇಬಲ್ ಟ್ರಸ್ಟ್ ಶಿಕ್ಷಣ ಸೇವೆಯ ತನ್ನ ಪಯಣವನ್ನು ಮತ್ತಷ್ಟು ವಿಸ್ತರಿಸುತ್ತಿದೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top