ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ "Beyond Borders – A Guide to Higher Education and Global Career Opportunities" ವಿಷಯದ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಗ್ಲೋಬಲ್ ರೀಚ್, ಮಂಗಳೂರು ಸಂಸ್ಥೆಯ ಬಿಸಿನೆಸ್ ಡೆವಲಪ್‌ಮೆಂಟ್ ವಿಭಾಗದ ಶೌನ್ ಪೀಟರ್ ಜೋಸೆಫ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕೆ ಲಭ್ಯವಿರುವ ಅವಕಾಶಗಳು, ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು, ವಿದ್ಯಾರ್ಥಿವೇತನ ಯೋಜನೆಗಳು, ಪ್ರವೇಶ ಮತ್ತು ವೀಸಾ ಪ್ರಕ್ರಿಯೆ, ಅಂತರರಾಷ್ಟ್ರೀಯ ವಿದ್ಯಾರ್ಥಿ ಜೀವನ ಹಾಗೂ ಜಾಗತಿಕ ಉದ್ಯೋಗ ಮಾರುಕಟ್ಟೆಯ ಇಂದಿನ ಪ್ರವೃತ್ತಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಜಾಗತಿಕ ಮಟ್ಟದಲ್ಲಿ ಯಶಸ್ಸು ಸಾಧಿಸಲು ಶೈಕ್ಷಣಿಕ ಸಾಧನೆಯ ಜೊತೆಗೆ ಸಂವಹನ ಕೌಶಲ್ಯ, ನಾಯಕತ್ವ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ನಿರಂತರ ಕಲಿಕೆಯ ಮನೋಭಾವ ಅತ್ಯಗತ್ಯ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ, ಇಂದಿನ ಶಿಕ್ಷಣವು ವಿದ್ಯಾರ್ಥಿಗಳನ್ನು ಕೇವಲ ಪದವೀಧರರನ್ನಾಗಿ ರೂಪಿಸುವುದಲ್ಲ, ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಮರ್ಥ ವೃತ್ತಿಪರರನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ಹೊಂದಿದೆ ಎಂದು ಹೇಳಿದರು. ಜಾಗತಿಕ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಜ್ಞಾನ, ಕೌಶಲ್ಯ, ಮೌಲ್ಯಗಳು ಹಾಗೂ ಆತ್ಮವಿಶ್ವಾಸದ ಸಮನ್ವಯ ಅಗತ್ಯವಾಗಿದ್ದು, ಇಂತಹ ಮಾರ್ಗದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿಶಾಲ ದೃಷ್ಟಿಕೋನವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ಗುಣಮಟ್ಟದ ಶಿಕ್ಷಣ ಹಾಗೂ ಜಾಗತಿಕ ಅವಕಾಶಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದು ತಿಳಿಸಿದರು.
ಐಕ್ಯೂಎಸಿ ಸಂಯೋಜಕರಾದ ಡಾ. ಎಡ್ವಿನ್ ಎಸ್. ಡಿಸೋಜಾ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಪೂಜಾಶ್ರೀ ಕಾರ್ಯಕ್ರಮ ನಿರೂಪಿಸಿ, ಡಾ. ಎಡ್ವಿನ್ ಎಸ್. ಡಿಸೋಜಾ ವಂದಿಸಿದರು.
"ಇಂದಿನ ಶಿಕ್ಷಣವು ಕೇವಲ ಪದವಿ ಗಳಿಸುವುದಕ್ಕಾಗಿಯೇ ಸೀಮಿತವಾಗಿರಬಾರದು; ಅದು ವಿಶ್ವದ ಯಾವುದೇ ವೇದಿಕೆಯಲ್ಲಿ ಆತ್ಮವಿಶ್ವಾಸದಿಂದ ನಿಲ್ಲುವ ವ್ಯಕ್ತಿತ್ವವನ್ನು ರೂಪಿಸಬೇಕು. ಜ್ಞಾನ, ಕೌಶಲ್ಯ, ಮೌಲ್ಯಗಳು ಮತ್ತು ನಾಯಕತ್ವ ಗುಣಗಳನ್ನು ಹೊಂದಿರುವ ಯುವಜನತೆಯೇ ರಾಷ್ಟ್ರದ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಜಾಗತಿಕ ಅವಕಾಶಗಳನ್ನು ಗುರುತಿಸಿ ತಮ್ಮ ಕನಸುಗಳಿಗೆ ವಿಶಾಲ ವ್ಯಾಪ್ತಿಯನ್ನು ನೀಡಬೇಕು"
- ವಂ.ಡಾ. ಜೆ. ಬಿ. ಸಾಲ್ದಾನ್ಹಾ
ಸಂಚಾಲಕರು, ಸಂತ ಫಿಲೋಮಿನಾ ಕಾಲೇಜು
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


