ಪುತ್ತೂರು: " ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು (NSS) ಪ್ರಮುಖ ಪಾತ್ರ ವಹಿಸುತ್ತದೆ.
ಎನ್‌ಎಸ್‌ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪೂರಕವಾಗಿವೆ " ಎಂದು ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಹರಿಪ್ರಸಾದ್ ಎಸ್. ಅಭಿಪ್ರಾಯಪಟ್ಟರು.
ಅವರು ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು, ಪುತ್ತೂರು ಇಲ್ಲಿ ನೆರವೇರಿದ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಉದ್ಘಾಟಿಸಿ, ಸಮಾಜಸೇವೆಯ ಮೌಲ್ಯಗಳ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದ ಆರಂಭದಲ್ಲಿ NSS ಅಧಿಕಾರಿಯಾದ ಡಾ. ಕೆ. ಚಂದ್ರಶೇಖರ್ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.
ಪುಷ್ಪ ಎನ್. ಅವರು ನೆರೆದಿದ್ದ ಸರ್ವರನ್ನೂ ಆದರದಿಂದ ಸ್ವಾಗತಿಸಿದರು.
ಘಟಕ ನಾಯಕರಾದ ಸಾಯಿ ಪ್ರತೀಶ್ ಅವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಆಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲೇ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ವೇದಿಕೆಯಲ್ಲಿ ಘಟಕ ನಾಯಕ ಬೃಂದನ್ ಹಾಗೂ NSS ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು. ಘಟಕ ನಾಯಕಿ ಸ್ಪಂದನಾ ಕಾರ್ಯಕ್ರಮವನ್ನು ಚೊಕ್ಕಟವಾಗಿ ನಿರೂಪಿಸಿದರು ಹಾಗೂ ಶಿಲ್ಪಾ ಧನ್ಯವಾದ ಸಮರ್ಪಿಸಿದರು.
ತದನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು, ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.

