ಉಜಿರೆ, ಆಗಸ್ಟ್ 22: ಎಸ್‌ಡಿಎಂ ಪಾಲಿಟೆಕ್ನಿಕ್‌ನ ಯುವ ರೆಡ್ ಕ್ರಾಸ್ (ವೈಆರ್‌ಸಿ) ಘಟಕ, ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಜೆಸಿಐ ಉಜಿರೆ ಸಿಟಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ರೆಡ್ ಕ್ರಾಸ್ ರಕ್ತನಿಧಿ ಘಟಕದ ಸಹಯೋಗದೊಂದಿಗೆ ಆಗಸ್ಟ್ 22ರಂದು ಕಾಲೇಜಿನ ಸಭಾಂಗಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಸಮಾಜದಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಅಗತ್ಯವಾಗುವ ರಕ್ತದ ಲಭ್ಯತೆಯನ್ನು ಖಚಿತಪಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರಕ್ಕೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶಿಬಿರದಲ್ಲಿ ಅನೇಕ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಭಾಗವಹಿಸಿ ರಕ್ತದಾನದ ಮೂಲಕ ಮಾನವೀಯ ಸೇವೆಯ ಸಂದೇಶವನ್ನು ಸಾರಿದರು.
ಕಾರ್ಯಕ್ರಮವನ್ನು ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಶ್ರೀ ಶ್ರೀಧರ್ ಕೆ.ವಿ., ಜೆಸಿಐ ಉಜಿರೆ ಸಿಟಿ ಅಧ್ಯಕ್ಷ ಶ್ರೀ ಮಹಮ್ಮದ್ ಮಿರ್ಶಾದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಳ್ತಂಗಡಿ ಘಟಕದ ಅಧ್ಯಕ್ಷ ಶ್ರೀ ಹರಿದಾಸ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮೇಘ ನಾಯ್ಕ ಅವರು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ರಕ್ತದಾನವು ಜೀವದಾನಕ್ಕೆ ಸಮಾನವಾಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬಹುದು ಎಂದು ಅಭಿಪ್ರಾಯಪಟ್ಟರು. ಯುವಜನತೆ ಇಂತಹ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದ್ದು, ರಕ್ತದಾನದಂತಹ ಕಾರ್ಯಗಳು ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಸಂತೋಷ್ ಅವರು ರಕ್ತದಾನ ಶಿಬಿರದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳ ಸಮಾಜಮುಖಿ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯನ್ನು ಶ್ಲಾಘಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಶ್ರೀ ಸಾಯಿಚರಣ್ ಸಿ.ಹೆಚ್. ಹಾಗೂ ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಶ್ರೀ ಅವನೀಶ್ ಪಿ. ಅವರು ಶಿಬಿರದ ಆಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಂಗಳೂರು ರೆಡ್ ಕ್ರಾಸ್ ರಕ್ತನಿಧಿ ಘಟಕದ ವೈದ್ಯಕೀಯ ತಂಡವು ರಕ್ತದಾನ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಿಕೊಟ್ಟಿತು. ರಕ್ತದಾನ ಮಾಡಿದ ವಿದ್ಯಾರ್ಥಿಗಳಿಗೆ ಅಗತ್ಯ ವೈದ್ಯಕೀಯ ಸಲಹೆ ಮತ್ತು ಆರೈಕೆಯನ್ನು ಒದಗಿಸಲಾಯಿತು. ಶಿಬಿರದಲ್ಲಿ ಒಟ್ಟು 39 ಯೂನಿಟ್ ರಕ್ತ ಸಂಗ್ರಹವಾಗಿದ್ದು, ಇದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೀವ ಉಳಿಸಲು ನೆರವಾಗಲಿದೆ ಎಂದು ಆಯೋಜಕರು ತಿಳಿಸಿದರು.
ಶಿಬಿರವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಯಶಸ್ವಿಯಾಗಿದ್ದು, ಸಮಾಜದ ಒಳಿತಿಗಾಗಿ ಎಸ್‌ಡಿಎಂ ಪಾಲಿಟೆಕ್ನಿಕ್ ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಸಂಸ್ಥೆಯ ವತಿಯಿಂದ ತಿಳಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

