ಉಜಿರೆ: ಕುಮಾರಿ ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳವು ಮುಕ್ತಮನಸ್ಸಿನಿಂದ ಸ್ವಾಗತಿಸಿದೆ. ಈ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ. ಪಾರ್ಶ್ವನಾಥ್ ಜೈನ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಸೌಜನ್ಯಾಳಿಗೆ ಶೀಘ್ರವೇ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ ಎಂದು ತಿಳಿಸಿರುವ ಅವರು, ಕಳೆದ ಹಲವು ವರ್ಷಗಳಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ಮೇಲೆ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣವಾಗಿ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಯಲಿ. ಆ ಮೂಲಕ ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆತು, ಸತ್ಯ ಹೊರಬರಲಿ ಎಂದು ಶ್ರೀ ಕ್ಷೇತ್ರದ ಪರವಾಗಿ ಅವರು ಆಶಿಸಿದ್ದಾರೆ.


