ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾ ನೇತೃತ್ವದಲ್ಲಿ ವಿಶೇಷ ಪೂಜೆ
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಕ್ರಮಣದ ಈ ಶುಭದಿನದಂದು ಗುರುವಾರ (ಸೆ.17) ವಿಶೇಷ ರುದ್ರಾಭಿಷೇಕ ಹಾಗೂ ಪೂಜೆ ನೆರವೇರಿಸಲಾಯಿತು.
ಪೂಜೆಯ ಬಳಿಕ ಮಾತನಾಡಿದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ ಅವರ ಜನ್ಮದಿನವನ್ನು ಸೇವಾ ಸಂಕಲ್ಪದ ಮೂಲಕ ಆಚರಿಸಲು ಅವಕಾಶ ದೊರೆತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು.
ಕದ್ರಿ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ, ಆಯುಷ್ಯ ಹಾಗೂ ದೇಶದ ಆಡಳಿತವನ್ನು ಯಶಸ್ವಿಯಾಗಿ ಮುನ್ನಡೆಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಗಿದೆ. ಸೆ.17ರಿಂದ ಅ.17 ರವರೆಗೆ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರ ಮೂಲಕ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು. ಇಂದು ಸಂಜೆ ಮನೆ ಮನೆಗಳಲ್ಲಿ ದೀಪ ಬೆಳಗಿಸುವ ಮೂಲಕ ಪ್ರಧಾನಿಗೆ ಶುಭ ಹಾರೈಸಲಾಗುವುದು ಎಂದು ತಿಳಿಸಿದರು.
ನರೇಂದ್ರ ಮೋದಿ ಅವರ ದೀರ್ಘಕಾಲದ ಸಾರ್ವಜನಿಕ ಸೇವೆ ಮತ್ತು ಆಡಳಿತದ ವಿವಿಧ ಯೋಜನೆಗಳು ಹಾಗೂ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಸೇವಾ ಸಂಕಲ್ಪ ಅಭಿಯಾನದ ಮೂಲಕ ಕೈಗೊಳ್ಳಲಾಗುವುದು. ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಮತ್ತು ಬಿಜೆಪಿ ಕಾರ್ಯಕರ್ತರ ಪರವಾಗಿ ಪ್ರಧಾನಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸುವುದಾಗಿ ಸತೀಶ್ ಕುಂಪಲ ಹೇಳಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸೇರಿಕೊಂಡು ಸೇವಾ ಸಂಕಲ್ಪ ಅಭಿಯಾನಕ್ಕೆ ಕದ್ರಿ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ ಎಂದರು.
ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಹಾಗೂ ಆರ್ಥಿಕ ಸಬಲೀಕರಣ ದೊರೆಯಬೇಕು, ದೇಶದ ಅಖಂಡತೆ ಮತ್ತು ಸಾಂಸ್ಕೃತಿಕ ಪುನರುಜ್ಜೀವನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಪ್ರಯತ್ನಗಳು ಮುಂದುವರಿಯಲಿ ಎಂದು ಕದ್ರಿ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ವಸಂತ್ ಜೆ. ಪೂಜಾರಿ, ನಂದನ್ ಮಲ್ಯ, ಪೂರ್ಣಿಮಾ, ಮನೋಹರ್ ಶೆಟ್ಟಿ, ಶಕೀಲಾ ಕಾವಾ, ರಮೇಶ್ ಕಂಡೆಟ್ಟು ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
